ಮೈಸೂರು : ಆಷಾಢ ಮಾಸದ ಮೊದಲ ಶುಕ್ರವಾರದಂದು ಮೈಸೂರಿನ ಚಾಮುಂಡಿ ಬೆಟ್ಟದಲ್ಲಿರುವ ನಾಡ ಅಧಿದೇವತೆ ಶ್ರೀ ಚಾಮುಂಡೇಶ್ವರಿ ದೇವಾಲಯದಲ್ಲಿ ವಿಶೇಷ ಪೂಜೆಗಳು ಮತ್ತು ಆಚರಣೆಗಳು ನೆರವೇರಿದೆ.
ದೇವಸ್ಥಾನದ ಗರ್ಭಗುಡಿ, ಗೋಪುರ ಮತ್ತು ದೇವಾಲಯದ ಆವರಣವನ್ನು ವಿಶೇಷ ವಿವಿಧ ಹೂಗಳಿಂದ ಅಲಂಕಾರ ಮಾಡಲಾಗಿದ್ದು, ಮುಂಜಾನೆಯಿಂದಲೇ ಚಾಮುಂಡಿ ತಾಯಿಗೆ ವಿಶೇಷ ಪೂಜೆ ನಡೆಯುತ್ತಿದೆ. ತಾಯಿ ಚಾಮುಂಡೇಶ್ವರಿ ನಾಗಲಕ್ಷ್ಮೀ ಅಲಂಕಾರದಲ್ಲಿ ಕಂಗೊಳಿಸುತ್ತಿದ್ದು, ಉತ್ಸವ ಮೂರ್ತಿಗೆ ವಿಶೇಷವಾಗಿ ಅಲಂಕಾರ ಮಾಡಲಾಗಿದೆ.
ದೇವಿಯ ದರ್ಶನಕ್ಕೆ ಬೆಳಗಿನ ಜಾವದಿಂದಲೇ ಲಕ್ಷಾಂತರ ಭಕ್ತರು ಆಗಮಿಸುತ್ತಿದ್ದು, ಈ ಬಾರಿ 2 ಸಾವಿರ ರೂ. ಮೌಲ್ಯದ ಟಿಕೆಟ್ ಪಡೆದವರಿಗೆ ನೇರ ದರ್ಶನದ ವ್ಯವಸ್ಥೆ ಮಾಡಲಾಗಿದೆ. ಅಭಿಷೇಕ, ಕುಂಕುಮಾರ್ಚನೆ, ಮಹಾಮಂಗಳಾರತಿ ಬಳಿಕ ದರ್ಶನಕ್ಕೆ ಅವಕಾಶ ನೀಡಲಾಗಿದ್ದು, ಮುಂಜಾನೆ 5:30ರಿಂದ ಬೆಳಗ್ಗೆ 10 ಗಂಟೆಯವರೆಗೆ ವಿವಿಐಪಿಗಳಿಗೆ ದರ್ಶನಕ್ಕೆ ಅವಕಾಶವಿದೆ.
iಇನ್ನು, ತಾಯಿಯ ದರ್ಶನಕ್ಕೆ ಭಕ್ತ ಸಾಗರವೇ ಹರಿದುಬಂದ ಕಾರಣ, ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಮತ್ತು ನೂಕುನುಗ್ಗಲು ಉಂಟಾಗದಂತೆ ಪೊಲೀಸ್ ಇಲಾಖೆಯು ಸೂಕ್ತ ಬಂದೋಬಸ್ತ್ ವ್ಯವಸ್ಥೆಯನ್ನು ಕಲ್ಪಿಸಿದೆ. ಭಕ್ತರು ಸರಾಗವಾಗಿ ದರ್ಶನ ಪಡೆಯಲು ಅಗತ್ಯವಿರುವ ಎಲ್ಲ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಈ ವಿಶೇಷ ದಿನದಂದು ದೇವಿಯ ದರ್ಶನ ಪಡೆದು ಪುನೀತರಾಗಲು ಬಂದ ಭಕ್ತರಿಗೆ ಅಗತ್ಯ ವ್ಯವಸ್ಥೆಗಳನ್ನು ಮಾಡಲಾಗಿದೆ.
ಇದನ್ನೂ ಓದಿ : N.S ಶಂಕರ್ ಸ್ಮರಣೆ ; ಜು.19ರಂದು ಹಿರಿಯ ಪತ್ರಕರ್ತನಿಗೆ ಭಾವಪೂರ್ಣ ನುಡಿನಮನ!


















