ಬೆಂಗಳೂರು: ನೆರೆ ರಾಜ್ಯಗಳ ಕನ್ನಡ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ಸಿಗಲಿದೆ. ಹೌದು ತಲಾ 25 ಸಾವಿರ ವಿದ್ಯಾರ್ಥಿ ವೇತನವನ್ನು ಕನ್ನಡ ಅಭಿವೃದ್ಧಿ ಪ್ರಾಧಿಕಾರ ಬಿಡುಗಡೆ ಮಾಡಿದೆ.
ನೆರೆ ರಾಜ್ಯಗಳ ವಿಶ್ವವಿದ್ಯಾಲಯಗಳಲ್ಲಿ ಕನ್ನಡ ಎಂ.ಎ ವ್ಯಾಸಂಗ ಮಾಡುತ್ತಿರುವ ಒಟ್ಟು ೧೦೨ ವಿದ್ಯಾರ್ಥಿಗಳಿಗೆ ತಲಾ ಇಪ್ಪತ್ತೈದು ಸಾವಿರ ರೂ.ಗಳಂತೆ ವಿದ್ಯಾರ್ಥಿವೇತನವನ್ನು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಮಂಜೂರು ಮಾಡಲಾಗಿದೆ ಎಂದು ಪ್ರಾಧಿಕಾರದ ಅಧ್ಯಕ್ಷ ಡಾ. ಪುರುಷೋತ್ತಮ ಬಿಳಿಮಲೆ ಹೇಳಿದ್ದಾರೆ.
ಕಳೆದ ಮೂರು ವರ್ಷಗಳಿಂದ ಅನುದಾನ ಕೊರತೆಯಿಂದ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಈ ಕಾರ್ಯಕ್ರಮವನ್ನು ಅನಿವಾರ್ಯವಾಗಿ ಸ್ಥಗಿತಗೊಳಿಸಿದ್ದು, ಈ ಬಾರಿಯ ಕೊರತೆ ಅನುದಾನದ ನಡುವೆಯೂ ಈ ವಿಶ್ವವಿದ್ಯಾಲಯಗಳಲ್ಲಿ 2024-25ನೇ ಸಾಲಿನಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ಹಿತದೃಷ್ಠಿಯಿಂದ ವಿದ್ಯಾರ್ಥಿವೇತನ ಮಂಜೂರಾತಿಗೆ ಕ್ರಮವಹಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕೇರಳ ಕೇಂದ್ರೀಯ ವಿಶ್ವವಿದ್ಯಾಲಯದ ಇಪ್ಪತ್ತೊಂದು ವಿದ್ಯಾರ್ಥಿಗಳು, ಕಾಸರಗೋಡಿನ ಕನ್ನಡ ಸ್ನಾತಕೋತ್ತರ ಅಧ್ಯಯನ ಮತ್ತು ಸಂಶೋಧನಾ ಕೇಂದ್ರದ ಇಪ್ಪತ್ತೇಳು ವಿದ್ಯಾರ್ಥಿಗಳು, ಮಹಾರಾಷ್ಟ್ರದ ಸೊಲ್ಲಾಪುರದ ಪುಣ್ಯಶ್ಲೋಕ ಅಹಿಲ್ಯಾದೇವಿ ಹೊಳ್ಕರ ವಿಶ್ವವಿದ್ಯಾಲಯದ ಇಪ್ಪತ್ತೈದು ವಿದ್ಯಾರ್ಥಿಗಳು, ಸೊಲ್ಲಾಪುರದ ಸಿಬಿ ಖೇಡಗಿ ಬಸವೇಶ್ವರ ಮಹಾವಿದ್ಯಾಲಯದ ಇಪ್ಪತ್ಮೂರು ವಿದ್ಯಾರ್ಥಿಗಳಿಗೆ ಅವಕಾಶ ಸಿಕ್ಕಿದೆ.


















