ಬೆಂಗಳೂರು | ಜೂನ್ 4ರಂದು ಬೆಂಗಳೂರಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನಡೆದಿದ್ದ ಕಾಲ್ತುಳಿತ ದುರಂತದ ಬಳಿಕ ಇನ್ನು ಮುಂದೆ ಬೆಂಗಳೂರಿನಲ್ಲಿ ಯಾವ ಕ್ರಿಕೆಟ್ ಪಂದ್ಯವೂ ನಡೆಯುವುದಿಲ್ಲ ಎಂದು ಬೇಸರದಲ್ಲಿದ್ದ ಕ್ರಿಕೆಟ್ ಅಭಿಮಾನಿಗಳಿಗೆ ಇದೀಗ ಶುಭ ಸುದ್ದಿಯೊಂದು ಸಿಕ್ಕಿದೆ.
ಟೀಂ ಇಂಡಿಯಾದ ಮಾಜಿ ಕ್ರಿಕೆಟಿಗ ವೆಂಕಟೇಶ್ ಪ್ರಸಾದ್ ಕೆಎಸ್ಸಿಎ ಅಧ್ಯಕ್ಷರಾಗಿ ಆಯ್ಕೆಯಾದ ಬಳಿಕ ರಾಜ್ಯ ಕ್ರಿಕೆಟ್‌ಗೆ ಮರುಜನ್ಮ ಸಿಕ್ಕಿದ್ದು, ಚಿನ್ನಸ್ವಾಮಿಯಲ್ಲಿ ಸ್ಥಗಿತಗೊಂಡಿದ್ದ ಕ್ರಿಕೆಟ್ ಚಟುವಟಿಕೆ ಗರಿಗೆದರಿದೆ. ಮಾತ್ರವಲ್ಲದೆ 2026ರ ಐಪಿಎಲ್ ಆವೃತ್ತಿಯ ಉದ್ಘಾಟನಾ ಪಂದ್ಯ ಚಿನ್ನಸ್ವಾಮಿಯಲ್ಲಿ ನಡೆಯುವ ಸಾಧ್ಯತೆಗಳಿವೆ ಎಂದು ವೆಂಕಟೇಶ್ ಪ್ರಸಾದ್ ಹೇಳಿದ್ದಾರೆ.
ಈ ಬಗ್ಗೆ ಮಾತನಾಡಿರುವ ಅವರು, ಬಿಸಿಸಿಐ ಕಾರ್ಯದರ್ಶಿಯನ್ನು ಭೇಟಿಯಾಗಿದ್ದು, ಅವರು 2026ರ ಐಪಿಎಲ್ ಉದ್ಘಾಟನಾ ಪಂದ್ಯವನ್ನು ಬೆಂಗಳೂರಿನಲ್ಲಿ ನಡೆಸಲು ಆಸಕ್ತಿ ತೋರಿಸಿದ್ದಾರೆ. ಐಪಿಎಲ್ ಮಾತ್ರವಲ್ಲದೆ ಅಂತರರಾಷ್ಟ್ರೀಯ ಪಂದ್ಯಗಳು ಕೂಡ ಇನ್ನು ಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿವೆ. ಆದಾಗ್ಯೂ ನಾವು ರಾಜ್ಯ ಸರ್ಕಾರದ ಬಳಿ ಈ ಬಗ್ಗೆ ಮಾತನಾಡಬೇಕಿದೆ. ಅವರ ಜೊತೆ ಸಭೆ ನಡೆಸಿದ ಬಳಿಕ ಮುಂದಿನ ನಿರ್ಧಾರ ತಿಳಿಸುತ್ತೇವೆ ಎಂದು ಹೇಳಿದ್ದಾರೆ.
ಇದನ್ನೂ ಓದಿ : ಸಿಎಂ ಸಿದ್ದರಾಮಯ್ಯ ಆರೋಗ್ಯದಲ್ಲಿ ಏರುಪೇರು | ಬೆಳಗಾವಿ ಸರ್ಕೀಟ್ ಹೌಸ್‌ಗೆ ರಾಜಕೀಯ ನಾಯಕರ ದಂಡು



















