ದಾವಣಗೆರೆ : ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಎಕ್ಸಲ್ ಕಟ್ ಆಗಿ ಸರ್ಕಾರಿ ಸಾರಿಗೆ ಬಸ್ ಪಲ್ಟಿಯಾದ ಪರಿಣಾಮ 50ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿರುವ ಘಟನೆ ಮರಬನಹಳ್ಳಿ ಗ್ರಾಮದ ಸಮೀಪ ನಡೆದಿದೆ. ಗಾಯಗೊಂಡವರಲ್ಲಿ 20ಕ್ಕೂ ಹೆಚ್ಚು ಜನರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.

ದಾವಣಗೆರೆಯಿಂದ ಬಸವಾಪಟ್ಟಣಕ್ಕೆ ತೆರಳುತ್ತಿದ್ದ ಸರ್ಕಾರಿ ಬಸ್‌ನಲ್ಲಿ ಸಾಕಷ್ಟು ಪ್ರಯಾಣಿಕರು ಪ್ರಯಾಣಿಸುತ್ತಿದ್ದರು. ಇದೇ ವೇಳೆ ಬಸ್‌ನ ಎಕ್ಸಲ್ ಇದ್ದಕ್ಕಿದ್ದಂತೆ ಕಟ್ ಆಗಿ ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾಗಿದೆ. ಸದ್ಯ ಗಾಯಗೊಂಡವರನ್ನು ಜಿಲ್ಲಾ ಆಸ್ಪತ್ರೆ ಹಾಗೂ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಗಿದೆ. ಗಂಭೀರವಾಗಿ ಗಾಯಗೊಂಡವರಿಗೆ ತುರ್ತು ಚಿಕಿತ್ಸೆ ನೀಡಲಾಗುತ್ತಿದೆ. ವೈದ್ಯರ ತಂಡ ಚಿಕಿತ್ಸೆ ಮುಂದುವರಿಸಿದ್ದು, ಕೆಲವರ ಸ್ಥಿತಿ ಚಿಂತಾಜನಕವಾಗಿದೆ ಎನ್ನಲಾಗಿದೆ.
ವಿದ್ಯಾರ್ಥಿ ಸಾವಿನ ಶಂಕೆ :
ಅಪಘಾತದಲ್ಲಿ ಓರ್ವ ವಿದ್ಯಾರ್ಥಿ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಆದರೆ, ಈ ಬಗ್ಗೆ ಅಧಿಕಾರಿಗಳಿಂದ ಅಧಿಕೃತ ಮಾಹಿತಿ ಇನ್ನೂ ಹೊರಬಂದಿಲ್ಲ. ಮೃತರ ಗುರುತು ಪತ್ತೆ ಹಾಗೂ ಗಾಯಾಳುಗಳ ವಿವರ ಸಂಗ್ರಹಿಸುವ ಕಾರ್ಯ ನಡೆಯುತ್ತಿದೆ.
ಘಟನೆ ಬಸವಾಪಟ್ಟಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಬಸ್ ತಾಂತ್ರಿಕ ದೋಷದಿಂದಲೇ ಪಲ್ಟಿಯಾಯಿತೇ ಅಥವಾ ನಿರ್ಲಕ್ಷ್ಯ ಕಾರಣವೇ ಎಂಬ ಬಗ್ಗೆ ಪರಿಶೀಲನೆ ನಡೆಯುತ್ತಿದೆ.
ಇದನ್ನೂ ಓದಿ : BPL ಬೆಟ್ಟಿಂಗ್ ಹಗರಣ – ಆಟಗಾರರು, ಅಧಿಕಾರಿಗಳ ಅಮಾನತು



















