ಬೆಂಗಳೂರು: ಜಾತಿಗಣತಿ ಮರು ಸಮೀಕ್ಷೆ ನಡೆಸಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ಸೆಪ್ಟೆಂಬರ್ 22ರಿಂದ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ಆರಂಭವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಗೃಹ ಕಚೇರಿ ಕೃಷ್ಣಾದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಜಾತಿಗಣತಿ ಮರು ಸಮೀಕ್ಷೆ ನಡೆಸಲು ನಿರ್ಧರಿಸಿರುವುದಾಗಿ ಹೇಳಿದ್ದಾರೆ.
ಸೆ.22ರಿಂದ ಜಾತಿಗಣತಿ ಮರು ಸಮೀಕ್ಷೆ ನಡೆಸಲಾಗುತ್ತಿದ್ದು, ಅ.7ರವರೆಗೆ ಒಟ್ಟು 15 ದಿನಗಳ ಕಾಲ ಸಮೀಕ್ಷೆ ನಡೆಯಲಿದೆ. ವೈಜ್ಞಾನಿಕವಾಗಿ ಸಮೀಕ್ಷೆ ನಡೆಯಬೇಕು. ಯಾವುದೇ ಮನೆಗಳು ತಪ್ಪಿ ಹೋಗದಂತೆ ಯಶಸ್ವಿಯಾಗಿ ಸಮೀಕ್ಷೆ ಕೈಗೊಳ್ಳಲು ಜನರು ಸಹಕರಿಸಬೇಕು ಎಂದು ಮನವಿ ಮಾಡಿದರು.
2015ರಲ್ಲಿ ಆಯೋಗದ ಅಧ್ಯಕ್ಷರಾಗಿದ್ದ ಕಾಂತರಾಜ್ ಅವರು ವರದಿಯನ್ನು ಸಲ್ಲಿಸಿದ್ದರು. ಕಾಂತರಾಜ್ ಅವರು ವರದಿಯನ್ನು ಸಲ್ಲಿಸಿ 10ವರ್ಷ ಆದ ಕಾರಣ ಹೊಸ ಸಮೀಕ್ಷೆಗೆ ತೀರ್ಮಾನ ಮಾಡಿ ಆ ಕಾರ್ಯವನ್ನು ಶಾಶ್ವತ ಹಿಂದುಳಿದ ವರ್ಗಗಳ ಆಯೋಗಕ್ಕೆ ಈಗ ವಹಿಸಲಾಗಿದೆ. ಸಮಾಜದಲ್ಲಿ ಅನೇಕ ಜಾತಿಗಳು ಇದ್ದು, ವೈರುಧ್ಯತೆಯಿಂದಾಗಿ ಕೂಡಿದ್ದು, ಅಸಮಾನತೆ ಈಗಲೂ ಇದೆ.
ಸಂವಿಧಾನ ಎಲ್ಲರಿಗೂ ಸಮಾನ ಅವಕಾಶ ಕಲ್ಪಿಸುತ್ತದೆ. ಸಾಮಾಜಿಕ ನ್ಯಾಯವನ್ನು ಎಲ್ಲರಿಗೂ ಒದಗಿಸಬೇಕು ಎಂದು ಸಂವಿಧಾನ ಹೇಳುತ್ತದೆ. ಡಾ.ಅಂಬೇಡ್ಕರ್ ಅವರು ಹೇಳಿದಂತೆ 1950 ಜನವರಿ 26ರಂದು ಜಾರಿಯಾದಾಗ, ನಾವು ವೈರುಧ್ಯತೆಯಿಂದ ಕೂಡಿದ ಸಮಾಜಕ್ಕೆ ಕಾಲಿಡುತ್ತಿದ್ದೇವೆ. ನಮ್ಮ ಸ್ವಾತಂತ್ರ್ಯ ಯಶಸ್ವಿಯಾಗಬೇಕಾದರೆ, ಪ್ರಜಾಪ್ರಭುತ್ವ ಉಳಿಯಬೇಕಾದರೆ ನಾವು ಅಸಮಾನತೆಯನ್ನು ತೊಲಗಿಸಲೇ ಬೇಕು ಎಂದು ಹೇಳಿದ್ದಾರೆ.