ಬೆಂಗಳೂರು: ಕೆಪಿಎಸ್ಸಿ ನೇಮಕಾತಿ ಅಕ್ರಮ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಕೆಪಿಎಸ್ಸಿ ಸದಸ್ಯೆ ಬಿ.ವಿ. ಗೀತಾ ಅವರ ಮನೆ ಮೇಲೆ ಎಸ್ಐಟಿ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.
ಗೀತಾ ಬಂಧನದ ಬಳಿಕ ನಿವಾಸಕ್ಕೆ ತೆರಳಿದ ಅಧಿಕಾರಿಗಳು ದಾಖಲೆಗಳ ಪರಿಶೀಲನೆ ಹಾಗೂ ಮಹಜರು ಪ್ರಕ್ರಿಯೆ ನಡೆಸಿದ್ದಾರೆ. ಅಭ್ಯರ್ಥಿ ನಂದೀಶ್ ಅವರಿಂದ ಗೀತಾ ತಮ್ಮದೇ ಕಾರಿನಲ್ಲಿ ತೆರಳಿ 20 ಲಕ್ಷ ರೂಪಾಯಿ ಹಣ ಪಡೆದುಕೊಂಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಈ ನಡುವೆ ಅಧಿಕಾರ ದುರ್ಬಳಕೆ ಹಾಗೂ ಅಕ್ರಮಗಳಲ್ಲಿ ಭಾಗಿಯಾಗಿರುವ ಆರೋಪದ ಹಿನ್ನೆಲೆಯಲ್ಲಿ ಬಿ.ವಿ. ಗೀತಾ ಅವರನ್ನು ಅಮಾನತು ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ.
ಗೀತಾ ಅವರನ್ನು ಅಮಾನತುಗೊಳಿಸುವಂತೆ ರಾಜ್ಯಪಾಲರಿಗೆ ಶಿಫಾರಸು ಮಾಡಲು ಸರ್ಕಾರ ತೀರ್ಮಾನಿಸಿದ್ದು, ಇಂದಿನ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ಚರ್ಚೆ ನಡೆಸಲಿದೆ.


















