ಬೆಂಗಳೂರು: ಸರ್ಕಾರಿ ವೈದ್ಯರು ಖಾಸಗಿ ಆಸ್ಪತ್ರೆಗಳಲ್ಲಿ ಒಳರೋಗಿ (IPD) ಸೇವೆ ನೀಡುವುದನ್ನು ಸಂಪೂರ್ಣವಾಗಿ ನಿಷೇಧಿಸಿ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಅವರು ಈ ಕುರಿತು ಸ್ಪಷ್ಟ ಸೂಚನೆ ನೀಡಿದ್ದಾರೆ.

ಸರ್ಕಾರಿ ವೈದ್ಯರು ಖಾಸಗಿ ಆಸ್ಪತ್ರೆಗಳಲ್ಲಿ ಕೇವಲ ಹೊರರೋಗಿ (OPD) ಸೇವೆ ಮಾತ್ರ ನೀಡಲು ಅವಕಾಶವಿದ್ದು, ಒಳರೋಗಿಗಳಿಗೆ ಚಿಕಿತ್ಸೆ ನೀಡುವುದು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಈ ಆದೇಶವನ್ನು ಉಲ್ಲಂಘಿಸಿ ಖಾಸಗಿ ಆಸ್ಪತ್ರೆಗಳಲ್ಲಿ ಐಪಿಡಿ ಸೇವೆ ನೀಡಿದರೆ ಸಂಬಂಧಪಟ್ಟ ವೈದ್ಯರ ವಿರುದ್ಧ ಕರ್ನಾಟಕ ನಾಗರಿಕ ಸೇವಾ ನಿಯಮಗಳ ಅಡಿಯಲ್ಲಿ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಆರೋಗ್ಯ ಇಲಾಖೆ ಸ್ಪಷ್ಟಪಡಿಸಿದೆ.
ಒಳರೋಗಿಗಳಿಗೆ ನಿರಂತರ ಆರೈಕೆ ಹಾಗೂ ನಿಯಮಿತ ಪರೀಕ್ಷೆಗಳ ಅವಶ್ಯಕತೆ ಇರುವುದರಿಂದ ಸರ್ಕಾರಿ ವೈದ್ಯರು ಖಾಸಗಿ ಆಸ್ಪತ್ರೆಗಳಲ್ಲಿ ಐಪಿಡಿ ಸೇವೆ ನೀಡುವುದರಿಂದ ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯರ ಸೇವೆಯಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆ ಇದೆ ಎಂದು ಇಲಾಖೆ ಅಭಿಪ್ರಾಯಪಟ್ಟಿದೆ.
ಈ ಹಿನ್ನೆಲೆಯಲ್ಲಿ ಯಾವುದೇ ಕಾರಣಕ್ಕೂ ಸರ್ಕಾರಿ ವೈದ್ಯರು ಖಾಸಗಿ ಆಸ್ಪತ್ರೆಗಳಲ್ಲಿ ಐಪಿಡಿ ಸೇವೆ ಸಲ್ಲಿಸಬಾರದು ಎಂದು ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ಸರ್ಕಾರಿ ಕೆಲಸದ ಅವಧಿಯಲ್ಲಿ ರೋಗಿಗಳಿಗೆ ಯಾವುದೇ ರೀತಿಯ ತೊಂದರೆ ಉಂಟಾಗಬಾರದು ಎಂಬುದು ಸರ್ಕಾರದ ಉದ್ದೇಶವಾಗಿದೆ. ಆದರೆ ಕರ್ತವ್ಯದ ಅವಧಿಯ ನಂತರ ಸರ್ಕಾರಿ ವೈದ್ಯರು ಖಾಸಗಿ ಕ್ಲಿನಿಕ್ ಅಥವಾ ಆಸ್ಪತ್ರೆಗಳಲ್ಲಿ ಕೆಲಸ ನಿರ್ವಹಿಸಬಹುದಾದರೂ, ರೋಗಿಗಳಿಗೆ ಕೇವಲ ಒಪಿಡಿ ಸೇವೆ ಮಾತ್ರ ನೀಡಬೇಕು ಎಂದು ಸೂಚಿಸಲಾಗಿದೆ.
ಇದನ್ನೂ ಓದಿ : ಕರ್ನಾಟಕ ಪೊಲೀಸರಿಗೆ ಇನ್ಮುಂದೆ ಹುಟ್ಟುಹಬ್ಬ, ವಿವಾಹ ವಾರ್ಷಿಕೋತ್ಸವಕ್ಕೆ ರಜೆ ಭಾಗ್ಯ | DG-IGP ಡಾ. ಎಂ.ಎ.ಸಲೀಂ ಆದೇಶ



















