ಗ್ರಾಮೀಣ ಪ್ರದೇಶಗಳಲ್ಲಿ ಪರ್ಯಾಯ ಇಂಧನ ವ್ಯವಸ್ಥೆಯನ್ನು ಪ್ರೋತ್ಸಾಹಿಸುವ ಸಲುವಾಗಿ ನೂತನ ಜೈವಿಕ ಇಂಧನ ನೀತಿಯನ್ನು ಜಾರಿಗೆ ತರಲು ರಾಜ್ಯ ಸರ್ಕಾರ ಮುಂದಾಗಿದೆ.
ಬುಧವಾರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಕರ್ನಾಟಕ ರಾಜ್ಯ ಜೈವಿಕ ಇಂಧನ ಅಭಿವೃದ್ಧಿ ಮಂಡಳಿಯ 10ನೇ ವಾರ್ಷಿಕ ಸರ್ವ ಸದಸ್ಯ ಸಮಿತಿ ಸಭೆಯ ನಂತರ ಜೈವಿಕ ಇಂಧನ ನೀತಿಯ ಬಗ್ಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಅವರು ಮಾತನಾಡಿದರು.
ಗ್ರಾಮೀಣ ಪ್ರದೇಶಗಳಲ್ಲಿ ಪರ್ಯಾಯ ಇಂಧನ ವ್ಯವಸ್ಥೆಗಳನ್ನು ಉತ್ತೇಜಿಸುವ ಗುರಿಯನ್ನು ಹೊಂದಲಾಗಿದ್ದು, ಈ ನಿಟ್ಟಿನಲ್ಲಿ ಹೊಸ ಜೈವಿಕ ಇಂಧನ ನೀತಿಯನ್ನು ಜಾರಿಗೆ ತರಲಾಗುತ್ತಿದ್ದು, ಇದು ಅಂತಿಮ ಹಂತದಲ್ಲಿದೆ ಎಂದು ಹೇಳಿದ್ದಾರೆ.
ಈಗಾಗಲೇ ಕೆಲವು ಪೂರ್ವ ಸಿದ್ಧತಾ ಕಾರ್ಯಯೋಜನೆಗಳನ್ನು ಕೈಗೊಳ್ಳಲಾಗಿದೆ, ರಾಜ್ಯದಲ್ಲಿ ಹಾಗೂ ಇತರ ರಾಜ್ಯಗಳಿಗೆ ಭೇಟಿ ನೀಡಿ ಜೈವಿಕ ಇಂಧನ ಕಾರ್ಯಯೋಜನೆಗಳ ಅನುಷ್ಟಾನ ಪ್ರಕ್ರಿಯೆ ಹಾಗೂ ವಸ್ತುಸ್ಥಿತಿ ಅಧ್ಯಯನ ಮಾಡಲಾಗಿದೆ, ಇದರೊಂದಿಗೆ ಕೇಂದ್ರ ಹಾಗೂ ರಾಜ್ಯ ಸರಕಾರಗಳ ಜೈವಿಕ ಇಂಧನ ನೀತಿಗಳ ವಿಶ್ಲೇಷಣೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.