ಮಡಿಕೇರಿ: ಸರ್ಕಾರಿ ಶಾಲೆಯ ಶಿಕ್ಷಕಿಯೊಬ್ಬರು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ನಡೆದಿದೆ.
ಈ ಘಟನೆ ಮಡಿಕೇರಿ ತಾಲೂಕಿನ ನಾಪೋಕ್ಲು ಪೊಲೀಸ್ ಠಾಣಾ ವ್ಯಾಪ್ತಿಯ ಎಮ್ಮೆಮಾಡುವಿನಲ್ಲಿ ನಡೆದಿದೆ. ಸಫ್ರೀನಾ ಶೇಕ್ (32) ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಶಿಕ್ಷಕಿ. ಮೃತ ಸಫ್ರೀನಾ ನಾಪೋಕ್ಲುವಿನ ಶಾಲೆಯಲ್ಲಿ ಅತಿಥಿ ಶಿಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿದ್ದು, ಬುಧವಾರ ರಾತ್ರಿ ಎಮ್ಮೆಮಾಡುವಿನ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಆದರೆ, ಮಹಿಳೆಯ ಕುಟುಂಬಸ್ಥರು ಕೊಲೆ ಮಾಡಿರುವ ಶಂಕೆ ವ್ಯಕ್ತಪಡಿಸಿದ್ದಾರೆ.
ಪತಿ ನಜೀರ್ ಹಾಗೂ ಸಫ್ರೀನಾ ನಡುವೆ ಮನೆಯಲ್ಲಿ ಸಾಲದ ವಿಚಾರವಾಗಿ ಆಗಾಗ ಜಗಳ ನಡೆಯುತ್ತಿತ್ತು ಎನ್ನಲಾಗಿದೆ. ಸಫ್ರೀನಾ ದೇಹದಲ್ಲಿ ಗಾಯಗಳ ಗುರುತು ಕಂಡು ಬಂದಿದೆ. ಹೀಗಾಗಿ ಪತಿ ನಜೀರ್ ಕೊಲೆ ಮಾಡಿ ನೇಣು ಹಾಕಿದ್ದಾನೆ ಎಂದು ಸಫ್ರೀನಾ ಸಹೋದರ ಹಾಗೂ ಕುಟುಂಬಸ್ಥರು ಆರೋಪಿಸಿದ್ದಾರೆ. ಈ ಕುರಿತು ನಾಪೋಕ್ಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.