ಬೆಂಗಳೂರು: ಮುಡಾ ಅಕ್ರಮ (MUDA Site Allotment Scam) ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯಗೆ (Siddaramaiah) ರಾಜ್ಯಪಾಲರು ನೋಟಿಸ್ ನೀಡಿದ್ದಾರೆ.
ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಕಾರ್ಯಕರ್ತರೊಬ್ಬರು ಪ್ರಾಸಿಕ್ಯೂಶನ್ ಗೆ ಅನುಮತಿ ಕೋರಿ ರಾಜ್ಯಪಾಲರಿಗೆ ಪತ್ರ ಬರೆದಿದ್ದರು. ಈ ವಿಷಯವನ್ನೇ ಮುಂದಿಟ್ಟುಕೊಂಡಿದ್ದು, ವಿವರಣೆ ಕೋರಿ ಸದ್ಯ ರಾಜ್ಯಪಾಲರು ಸಿಎಂ ಸಿದ್ದರಾಮಯ್ಯಗೆ ನೋಟಿಸ್ ನೀಡಿದ್ದಾರೆ.
ಆದರೆ, ಇದಕ್ಕೆ ಇಡೀ ಕಾಂಗ್ರೆಸ್ ಸರ್ಕಾರ ಆಕ್ರೋಶ ವ್ಯಕ್ತಪಡಿಸಿದೆ. ಇಡಿ ಜೊತೆಗೆ ರಾಜಭವನದ ದುರುಪಯೋಗವಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಆದರೆ, ಈ ಮಧ್ಯೆ ಮುಡಾ ವಿಚಾರದಲ್ಲಿ ಪ್ರಾಸಿಕ್ಯೂಶನ್‌ಗೆ ಅನುಮತಿ ಕೊಡುವುದರ ವಿರುದ್ಧ ನಾಳೆ ಕ್ಯಾಬಿನೆಟ್‌ನಲ್ಲಿ ವಿರೋಧಿ ನಿರ್ಣಯ ತೆಗೆದುಕೊಳ್ಳುವ ಸಾಧ್ಯತೆ ಇದೆ.
ಕ್ಯಾಬಿನೆಟ್ ನಿರ್ಣಯದ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯ ಸಭೆಯಿಂದ ಹೊರಗುಳಿಯಲಿದ್ದಾರೆ ಎನ್ನಲಾಗಿದೆ. ಬಿಜೆಪಿಗರು ಪ್ರತಿ ದಾಳಿಗೆ ನಿಂತಿದ್ದಾರೆ. ಆದರೆ ವಾಲ್ಮೀಕಿ ನಿಗಮ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ವಿರುದ್ಧ ಪ್ರಾಸಿಕ್ಯೂಶನ್ ಗೆ ಇಲ್ಲಿಯವರೆಗೂ ಇಡಿ ಅನುಮತಿ ಕೇಳಿಲ್ಲ. ಇದೆಲ್ಲವುದಕ್ಕಿಂತ ಕುತೂಹಲ ಎಂದರೆ, ಈ ಗದ್ದಲ-ಗೊಂದಲದ ಮಧ್ಯೆ ಡಿಸಿಎಂ ಡಿ.ಕೆ. ಶಿವಕುಮಾರ್ ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿರುವುದು. ನೀರಾವರಿ ಮತ್ತು ಬೆಂಗಳೂರು ಅಭಿವೃದ್ಧಿ ವಿಚಾರವಾಗಿ ಚರ್ಚೆ ನಡೆಸಲು ತೆರಳಿದ್ದಾರೆ ಎಂದು ಹೇಳಿದ್ದಾರೆ. ಆದರೂ ರಾಜ್ಯ ರಾಜಕಾರಣ ಮಾತ್ರ ಗೊಂದಲದ ಗೂಡಾಗಿದೆ.