ಬೆಂಗಳೂರು : ರಾಜ್ಯದಲ್ಲಿ ಎಲ್ಲಾ ಅರಣ್ಯ ಪ್ರದೇಶದೊಳಗೆ ಹಸು-ಕರು, ಮೇಕೆ, ಕುರಿ ಮತ್ತಿತರ ಜಾನುವಾರುಗಳನ್ನು ಮೇಯಿಸುವುದಕ್ಕೆ ನಿಷೇಧ ಹೇರಲು ನಿಯಮಾನುಸಾರ ಕ್ರಮ ತೆಗೆದುಕೊಳ್ಳುವಂತೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ದೊಡ್ಡ ಸಂಖ್ಯೆಯಲ್ಲಿ ಜಾನುವಾರುಗಳನ್ನು ಅರಣ್ಯ ಪ್ರದೇಶದೊಳಗೆ ಮೇಯಲು ಬಿಡುವುದರಿಂದ ಕಾಡಿನಲ್ಲಿ ಆಗಷ್ಟೇ ಮೊಳಕೆವೊಡೆದು ಚಿಕ್ಕಪುಟ್ಟ ಸಸಿಗಳು ಸಾಕು ಪ್ರಾಣಿಗಳಿಗೆ ಆಹಾರವಾಗಿ, ಅರಣ್ಯದಲ್ಲಿ ಹೊಸ ಗಿಡಗಳು ಬೆಳೆಯದೇ ಅರಣ್ಯ ಸಂವರ್ಧನೆಗೆ ಅಡ್ಡಿಯಾಗುತ್ತಿದೆ ಎಂದು ಪರಿಸರ ಪ್ರೇಮಿಗಳು ಅಭಿಪ್ರಾಯ ಪಟ್ಟಿದ್ದಾರೆ ಎಂದು ಖಂಡ್ರೆ ಹೇಳಿದ್ದಾರೆ.
ಕಾಡಿನಲ್ಲಿರುವ ವನ್ಯಜೀವಿಗಳು ಮೇಯಲು ಹೋದ ದನಕರುಗಳನ್ನು ಕೊಂಡಾಗ, ಆಕ್ರೋಶಗೊಂಡು ಕೆಲವರು ಮೃತ ಜಾನುವಾರುಗಳಿಗೆ ವಿಷ ಹಾಕುವ ಕಾರಣ ವನ್ಯ ಜೀವಿಗಳು ಸಾವಿಗೀಡಾಗುತ್ತದೆ. ಇದಕ್ಕೆ ಇತ್ತೀಚೆಗೆ ಹೂಗ್ಯಂ ವಲಯದಲ್ಲಿ ಒಂದು ತಾಯಿ ಹುಲಿ ಮತ್ತು ನಾಲ್ಕು ಮರಿ ಹುಲಿಗಳು ಸಾವಿಗೀಡಾಗಿರುವುದೇ ಸಾಕ್ಷಿಯಾಗಿದೆ ಎಂದು ಪರಿಸರ ಪ್ರೇಮಿಗಳು ಅಭಿಪ್ರಾಯ ಪಟ್ಟಿದ್ದಾರೆ ಎಂದವರು ತಮ್ಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ದೊಡ್ಡ ಸಂಖ್ಯೆಯಲ್ಲಿ ಸಾಕು ಪ್ರಾಣಿಗಳು ಕಾಡಿನಲ್ಲಿ ಮೇಯುವುದರಿಂದ ಕಾಡಿನಲ್ಲಿರುವ ಸಸ್ಯಾಹಾರಿ ಪ್ರಾಣಿಗಳಿಗೂ ಮೇವಿನ ಕೊರತೆ ಉಂಟಾಗುತ್ತದೆ. ಮಿಗಿಲಾಗಿ ಊರಿನಿಂದ ಕಾಡಿಗೆ ಮೇಯಲು ಹೋಗುವ ಪ್ರಾಣಿಗಳಿಂದ ವನ್ಯಜೀವಿಗಳು ಸಾಂಕ್ರಾಮಿಕ ರೋಗಗಳಿಗೆ ಒಳಗಾಗುವ ಸಾಧ್ಯತೆಯೂ ಇರುತ್ತದೆ ಎಂಬ ಅಂಶವನ್ನೂ ಅವರು ಉಲ್ಲೇಖಿಸಿದ್ದಾರೆ.



















