ಬೆಂಗಳೂರು : ಬೆಂಗಳೂರಿನಲ್ಲಿ ನಾಗರಿಕ ಸ್ನೇಹಿ ಸೇವೆ, ಉತ್ತಮ ಆಡಳಿತ, ಪರಿಣಾಮಕಾರಿಯಾಗಿ ಯೋಜನೆಗಳನ್ನು ಜಾರಿಗೊಳಿಸುವ ಉದ್ದೇಶದಿಂದ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ಜಾರಿಗೆ ತಂದು ಐದು ಪಾಲಿಕೆಗಳನ್ನು ಅಸ್ತಿತ್ವಕ್ಕೆ ತರಲಾಗಿದೆ. ಇದು ಸಿದ್ದರಾಮಯ್ಯ ನೇತೃತ್ವದ ಸರಕಾರದ ಐತಿಹಾಸಿಕ ತೀರ್ಮಾನ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಡಿಕೆಶಿ, ಸೆ.2ರಂದು ಬೆಂಗಳೂರು ಮಹಾನಗರದ ಪಾಲಿಗೆ ವಿಶೇಷವಾದ ದಿನ. ಈ ದಿನದಿಂದ ಬೆಂಗಳೂರಿನಲ್ಲಿ ಐದು ಪಾಲಿಕೆಗಳು ಅಸ್ತಿತ್ವಕ್ಕೆ ಬಂದಿವೆ. ಬೆಂಗಳೂರು ಕೇಂದ್ರ ನಗರ ಪಾಲಿಕೆ, ಬೆಂಗಳೂರು ಉತ್ತರ ನಗರ ಪಾಲಿಕೆ, ಬೆಂಗಳೂರು ದಕ್ಷಿಣ ನಗರ ಪಾಲಿಕೆ, ಬೆಂಗಳೂರು ಪೂರ್ವ ನಗರ ಪಾಲಿಕೆ, ಬೆಂಗಳೂರು ದಕ್ಷಿಣ ನಗರ ಪಾಲಿಕೆಗಳನ್ನು ರಚಿಸಲಾಗಿದೆ ಎಂದು ಹೇಳಿದ್ದಾರೆ.
ಈ ಪಾಲಿಕೆಗಳನ್ನು ಬೆಂಗಳೂರಿನ ಹೆಸರಿನೊಂದಿಗೆ ರಚಿಸಲು ಕಾನೂನಿನಲ್ಲೆ ತಿಳಿಸಿದ್ದೇವೆ. ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿ ಆ.26ರಂದು ಗ್ರೇಟರ್ ಬೆಂಗಳೂರು ಆಡಳಿತ ಪ್ರಾಧಿಕಾರ ಸಮಿತಿ ರಚನೆಯಾಗಿದೆ. ಇದರಲ್ಲಿ 75 ಸದಸ್ಯರನ್ನು ನೇಮಕ ಮಾಡಲಾಗಿದೆ. ಎಲ್ಲ ವಲಯಗಳಲ್ಲಿ ಆಯಾ ವ್ಯಾಪ್ತಿಯ ಅಧಿಕಾರಿಗಳನ್ನು ನೇಮಕ ಮಾಡಿದ್ದೇವೆ. ಪ್ರತಿ ಪಾಲಿಕೆಯಲ್ಲಿ ಆಡಳಿತಾಧಿಕಾರಿಗಳಾಗಿ ಆಯುಕ್ತರನ್ನು ನೇಮಕ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ಆಯುಕ್ತರಿಗೆ ನೆರವಾಗಲು, ಹೆಚ್ಚುವರಿ ಆಯುಕ್ತರು, ಜಂಟಿ ಆಯುಕ್ತರು, ಕೆಎಎಸ್ ಅಧಿಕಾರಿಗಳು ಹಾಗೂ ಮುಖ್ಯ ಇಂಜಿನಿಯರ್ ಕಡ್ಡಾಯವಾಗಿ ಇರುತ್ತಾರೆ. ಈ ಹಿಂದೆ ಇದ್ದ 27 ವಿಭಾಗಗಳನ್ನು 50 ವಿಭಾಗಗಳಾಗಿ ಮಾಡಿದ್ದೇವೆ. 75 ಉಪ ವಿಭಾಗಗಳನ್ನು 150ಕ್ಕೆ ಏರಿಸಿದ್ದೇವೆ. ಪ್ರತಿ ಪಾಲಿಕೆಯಲ್ಲಿ ಗರಿಷ್ಠ 150 ವಾರ್ಡ್ ಗಳವರೆಗೆ ಅವಕಾಶ ಕಲ್ಪಿಸಲಾಗಿದೆ. ಪ್ರತಿ ಪಾಲಿಕೆಯಲ್ಲಿ ಸರಾಸರಿಯಲ್ಲಿ 100 ವಾರ್ಡ್ ಗಳಂತೆ ಬೆಂಗಳೂರಿನಲ್ಲಿ ಸುಮಾರು 500 ಹೊಸ ನಾಯಕರನ್ನು ಆಯ್ಕೆ ಮಾಡುವ ಅವಕಾಶ ಕಲ್ಪಿಸಲಾಗಿದೆ. ಇದರಲ್ಲಿ ಮಹಿಳೆಯರು ಹಾಗೂ ಪುರುಷರು 50:50 ಇರುತ್ತಾರೆ ಎಂದು ಮಾಹಿತಿ ನೀಡಿದ್ದಾರೆ.
ಬುಧವಾರದಿಂದಲೇ (ಸೆ.03) ಆಯಾ ಪಾಲಿಕೆ ವ್ಯಾಪ್ತಿಯಲ್ಲಿ ಸಂಗ್ರಹವಾಗುವ ತೆರಿಗೆ ಹಣ ಆಯಾ ಪಾಲಿಕೆಗೆ ಸೇರಲಿದೆ. ಈ ತೆರಿಗೆ ಹಣ ಜಿಬಿಎಗಾಗಲಿ ಅಥವಾ ರಾಜ್ಯ ಸರಕಾರಕ್ಕಾಗಲಿ ಬರುವುದಿಲ್ಲ. ಪಾಲಿಕೆಗಳಿಗೆ ಸ್ವಾಯತ್ತತೆ ನೀಡಲಾಗಿದೆ. ಮುಂದೆ ಜಿಬಿಎ ಮೂಲಕ ದೊಡ್ಡ ದೊಡ್ಡ ಯೋಜನೆಗಳ ಜಾರಿ, ಉತ್ತಮ ಆಡಳಿತ, ಸೇವೆಗೆ ಮೀಸಲಾಗಿರಲಿದೆ ಎಂದು ಅವರು ಹೇಳಿದ್ದಾರೆ.
ಸರಕಾರದಿಂದ ಬಂದ ಹಣ ಜಿಬಿಎ ಹಾಗೂ ಪಾಲಿಕೆಗಳಿಗೆ ಹೋಗಲಿದೆ. ಇನ್ನು ಮುಂದಿನ ದಿನಗಳಲ್ಲಿ ಕಾನೂನು ಚೌಕಟ್ಟಿನಲ್ಲಿ ಚುನಾವಣೆ ನಡೆಯಲಿದೆ. ಸಧ್ಯ ನಗರದ ಜನಸಂಖ್ಯೆ 1.44 ಕೋಟಿ ಎಂದು ಅಂದಾಜಿಸಲಾಗಿದೆ. 2011ರ ಜನಗಣತಿ ಪ್ರಕಾರ ವಾರ್ಡ್ ನಲ್ಲಿ 20 ಸಾವಿರ ಜನಸಂಖ್ಯೆ ಇತ್ತು. ಈಗ 35-40 ಸಾವಿರ ಸರಾಸರಿಯಲ್ಲಿ ವಾರ್ಡ್ ರಚನೆ ಮಾಡಲಾಗುವುದು ಎಂದು ಶಿವಕುಮಾರ್ ವಿವರಿಸಿದ್ದಾರೆ.
ಜಿಬಿಎ ಮೂಲಕ ಸಭೆ ಯಾವಾಗ ಮಾಡಲಾಗುವುದು ಎಂದು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಪ್ರತಿ ಮೂರು ತಿಂಗಳಿಗೊಮ್ಮೆ ಕಡ್ಡಾಯವಾಗಿ ಸಭೆ ಮಾಡಬೇಕು. ಪಾಲಿಕೆಗಳಲ್ಲಿ ಎಂದಿನಂತೆ ಅವುಗಳ ಕಾರ್ಯಚಟುವಟಿಕೆ ಸಾಗುತ್ತಿರುತ್ತದೆ. ಎಲ್ಲ ಪಾಲಿಕೆಗಳ ಮೇಯರ್ ಅಧಿಕಾರ ಅವಧಿ ಎರಡೂವರೆ ವರ್ಷಕ್ಕೆ ಸೀಮಿತಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ.
ನ.1ರಂದು ವಾರ್ಡ್ ಪುನರ್ ವಿಂಗಡಣೆ ಹಾಗೂ ನ.30ರಂದು ವಾರ್ಡುಗಳ ಮೀಸಲಾತಿ ಅಂತಿಮ ಅಧಿಸೂಚನೆ ಹೊರಡಿಸಲಾಗುವುದು. ಇದಾದ ಬಳಿಕ ಚುನಾವಣಾ ಆಯೋಗ ಚುನಾವಣೆ ನಡೆಸಲಿದೆ. ಇದಕ್ಕಾಗಿ ಪೂರ್ವ ಸಿದ್ಧತೆ ಮಾಡಿಕೊಳ್ಳುವಂತೆ ಚುನಾವಣಾ ಆಯೋಗಕ್ಕೆ ಪತ್ರ ಬರೆಯಲಾಗಿದೆ ಎಂದು ಅವರು ಹೇಳಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ನಗರಾಭಿವೃದ್ಧಿ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ತುಷಾರ್ ಗಿರಿನಾಥ್, ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಮುಖ್ಯ ಆಯುಕ್ತ ಡಾ.ಮಹೇಶ್ವರರಾವ್, ಡಿಸಿಎಂ ಕಾರ್ಯದರ್ಶಿ ರಾಜೇಂದ್ರ ಚೋಳನ್ ಮತ್ತಿತರರು ಉಪಸ್ಥಿತರಿದ್ದರು.



















