ರಾಮನಗರ: ಸಣ್ಣ ವ್ಯಾಪಾರಿಗಳಿಗೆ ಜಿಎಸ್‌ಟಿ ನೋಟಿಸ್ ನೀಡುತ್ತಿರುವ ಹಿನ್ನೆಲೆ ರಾಮನಗರದಲ್ಲಿ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಪ್ರತಿಭಟನೆ ನಡೆಸಿದ್ದಾರೆ.
ತಳ್ಳುವ ಗಾಡಿಯಲ್ಲಿ ತರಕಾರಿ, ಬೇಕರಿ ಉತ್ಪನ್ನಗಳ ಮಾರಾಟ ಮಾಡಿ ವಿನೂತನ ಪ್ರತಿಭಟನೆ ನಡೆಸಿದ ವಾಟಾಳ್, ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸಣ್ಣಪುಟ್ಟ ವ್ಯಾಪಾರಿಗಳ ಮೇಲೆ ರಾಜ್ಯ ಸರ್ಕಾರ ತೆರಿಗೆ ಬ್ರಹ್ಮಾಸ್ತ್ರ ಹೂಡುತ್ತಿದೆ. ವ್ಯಾಪಾರಿಗಳಲ್ಲಿ ಆತಂಕ ಸೃಷ್ಟಿಸುವ ಕೆಲಸ ಮಾಡುತ್ತಿದೆ. ಜಿಎಸ್‌ಟಿ ವಿಚಾರದಲ್ಲಿ ರಾಜ್ಯ ಹಾಗೂ ಕೇಂದ್ರದ ನಡುವೆ ತಿಕ್ಕಾಟ ನಡೆಯುತ್ತಿದೆ. ಈ ಕಾರಣಕ್ಕೆ ಸಣ್ಣಪುಟ್ಟ ವ್ಯಾಪಾರಸ್ಥರ ಮೇಲೆ ದುಪ್ಪಟ್ಟು ಟ್ಯಾಕ್ಸ್ ಹಾಕಲಾಗುತ್ತಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಮುಂದಿನ ದಿನಗಳಲ್ಲಿ ಮೂತ್ರ ವಿಸರ್ಜನೆಗೂ ಜಿಎಸ್‌ಟಿ ಹಾಕುತ್ತಾರೆ. ಉಸಿರಾಡುವುದಕ್ಕೂ ಸರ್ಕಾರ ಜಿಎಸ್‌ಟಿ ಹಾಕಬಹುದು. ಕೂಡಲೇ ಸಿಎಂ ಸಿದ್ದರಾಮಯ್ಯ ಸಣ್ಣ ವ್ಯಾಪಾರಿಗಳ ರಕ್ಷಣೆ ಮಾಡಬೇಕು. ಈ ಜಿಎಸ್‌ಟಿ ವಿಧಿಸುವ ನಿರ್ಧಾರದಿಂದ ಹಿಂದೆ ಸರಿಯಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಕರ್ನಾಟಕ ಬಂದ್ ಮಾಡುವುದಾಗಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.