ಐಪಿಎಲ್ ನ 47ನೇ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ತಂಡವು ಗುಜರಾತ್ ಟೈಟನ್ಸ್ (RR vs GT) ವಿರುದ್ಧ ಮಕಾಡೆ ಮಲಗಿದೆ. 14 ವರ್ಷದ ಬಾಲಕನ ಅದ್ಭುತ ಆಟಕ್ಕೆ ಗುಜರಾತ್ ಬೌಲರ್ ಗಳು ಮಂಡಿಯೂರಿದ್ದಾರೆ.
ಮೊದಲು ಬ್ಯಾಟ್ ಮಾಡಿದ ಗುಜರಾತ್ ತಂಡ 209 ರನ್ ಗಳ ಬೃಹತ್ ಮೊತ್ತ ಕಲೆ ಹಾಕಿತ್ತು. ಕಠಿಣ ಗುರಿ ಬೆನ್ನಟ್ಟಿದ ರಾಜಸ್ಥಾನ್ ತಂಡವು ಕೇವಲ 2 ವಿಕೆಟ್ ಕಳೆದುಕೊಂಡು ಗೆಲುವಿನ ನಗೆ ಬೀರಿತು. ಅದೂ ಕೇವಲ 15.5 ಓವರ್ಗಳಲ್ಲಿ ಗೆಲುವಿನ ನಗೆ ಬೀರಿತು. ರಾಜಸ್ಥಾನ್ ಪರ ಸಿಡಿಲಬ್ಬರದ ಶತಕ ಸಿಡಿಸಿದ 14 ವರ್ಷದ ವೈಭವ್ ಸೂರ್ಯವಂಶಿ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದರು. ಅಲ್ಲದೇ, ಹಲವು ದಾಖಲೆಗಳನ್ನು ವೈಭವ್ ಬರೆದಿದ್ದಾರೆ.
ಮೊದಲು ಬ್ಯಾಟಿಂಗ್ ಮಾಡಿದ ಗುಜರಾತ್ ಪರ ಸಾಯಿ ಸುದರ್ಶನ್ 39, ಶುಭ್ಮನ್ ಗಿಲ್ 84, ಜೋಸ್ ಬಟ್ಲರ್ 50 ರನ್ ಗಳಿಸಿದರು. ಪರಿಣಾಮ ತಂಡವು 209 ರನ್ ಗಳಿಸಿತು. ಈ ಕಠಿಣ ಗುರಿ ಬೆನ್ನಟ್ಟಿದ ರಾಜಸ್ಥಾನ್ ತಂಡ, 210 ರನ್‌ಗಳ ಗುರಿ ಬೆನ್ನಟ್ಟಿದ ರಾಜಸ್ಥಾನ್ಗೆ ವೈಭವ್ ಸೂರ್ಯವಂಶಿ ಭರ್ಜರಿ ಶಕ್ತಿ ತುಂಬಿದರು.
ವೈಭವ್, ಮೊದಲ 17 ಎಸೆತಗಳಲ್ಲಿ 6 ಸಿಕ್ಸರ್ ಮತ್ತು 3 ಬೌಂಡರಿಗಳ ಸಹಾಯದಿಂದ ಅರ್ಧಶತಕ ಪೂರ್ಣಗೊಳಿಸಿದರು. ನಂತರ 35 ಎಸೆತಗಳಲ್ಲಿ ತಮ್ಮ ಚೊಚ್ಚಲ ಐಪಿಎಲ್ ಶತಕ ಪೂರ್ಣಗೊಳಿಸಿದರು. ಈ ಮೂಲಕ ಸೂರ್ಯವಂಶಿ ಐಪಿಎಲ್ ಇತಿಹಾಸದಲ್ಲಿ ಅತ್ಯಂತ ವೇಗದ ಶತಕ ಪೂರೈಸಿದ ಮೊದಲ ಭಾರತೀಯ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ಅಲ್ಲದೇ, ಎರಡನೇ ವೇಗದ ಶತಕ ಸಿಡಿಸಿದ ಸಾಧನೆ ಮಾಡಿದರು.



















