ಬೆಂಗಳೂರು: ನಗರದ ತಲಘಟ್ಟಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕುಡಿದ ಮತ್ತಿನಲ್ಲಿ ವ್ಯಕ್ತಿಯೊಬ್ಬನಿಂದ ಸ್ಥಳೀಯರು ಭಾರೀ ಕಿರುಕುಳಕ್ಕೆ ಒಳಗಾಗುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ಲೇಔಟ್‌ನಲ್ಲಿ ವಾಸಿಸುತ್ತಿರುವ ಈ ವ್ಯಕ್ತಿ ಪ್ರತಿದಿನ ಮದ್ಯಪಾನ ಮಾಡಿ ಸಾರ್ವಜನಿಕ ಸ್ಥಳಗಳಲ್ಲಿ ಹುಚ್ಚಾಟ ನಡೆಸುತ್ತಿದ್ದು, ಅತಿವೇಗವಾಗಿ ಕಾರ್ ಚಾಲನೆ ಮಾಡುವುದು ಹಾಗೂ ಅಶ್ಲೀಲ ಪದಗಳನ್ನು ಬಳಸುವುದು ಅವನ ನಿತ್ಯದ ವರ್ತನೆಯಾಗಿದೆ. ರಸ್ತೆಯಲ್ಲಿ ಸಿಕ್ಕ ಸಿಕ್ಕವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸುವುದಲ್ಲದೇ, ಭಯದ ವಾತಾವರಣ ಸೃಷ್ಟಿಸುತ್ತಿದ್ದಾನೆ ಎಂದು ನಿವಾಸಿಗಳು ದೂರಿದ್ದಾರೆ.
ಇತ್ತೀಚೆಗೆ ಸ್ಥಳೀಯ ನಿವಾಸಿಯೊಬ್ಬರ ಮೇಲೆ ಕೈ ಎತ್ತಿ ಹಲ್ಲೆ ನಡೆಸಿದ ಘಟನೆ ಸಹ ನಡೆದಿದೆ. ಈ ಘಟನೆ ಬಳಿಕ ಸ್ಥಳೀಯರಲ್ಲಿ ಆತಂಕ ಮತ್ತಷ್ಟು ಹೆಚ್ಚಾಗಿದೆ. ಗಮನಾರ್ಹ ಸಂಗತಿಯೇನೆಂದರೆ, ಈತನ ವಿರುದ್ಧ ಈಗಾಗಲೇ ಮೂರು ಎಫ್‌ಐಆರ್‌ಗಳು ದಾಖಲಾಗಿದ್ದರೂ ಕೂಡ ಪೊಲೀಸರು ಕಠಿಣ ಕ್ರಮ ಕೈಗೊಳ್ಳುತ್ತಿಲ್ಲ ಎಂಬುದು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ.
ಈ ಸಂಬಂಧ ತಲಘಟ್ಟಪುರ ಪೊಲೀಸ್ ಠಾಣೆಗೆ ಅನೇಕ ಬಾರಿ ದೂರು ನೀಡಿದರೂ ಸಮಸ್ಯೆಗೆ ಶಾಶ್ವತ ಪರಿಹಾರ ಸಿಕ್ಕಿಲ್ಲ ಎಂದು ನಿವಾಸಿಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ತಕ್ಷಣ ಕ್ರಮ ಕೈಗೊಂಡು ಸಾರ್ವಜನಿಕರ ಸುರಕ್ಷತೆ ಒದಗಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.
ಇದನ್ನೂ ಓದಿ : ಬೆಳ್ಳಂಬೆಳಗ್ಗೆ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ : ನಾಲ್ವರು ಸಾವು


















