ಹಾಸನ: ಚಿತ್ರದುರ್ಗ ಸ್ಲೀಪರ್ ಕೋಚ್ ದುರಂತದ ಬೆನ್ನಲ್ಲೇ ಮತ್ತೊಂದು ಸ್ಲೀಪರ್ ಕೋಚ್ ಬಸ್ ಹೊತ್ತಿ ಉರಿದ ಘಟನೆ ಹಾಸನ ತಾಲೂಕಿನ ಶಾಂತಿಗ್ರಾಮ ಸಮೀಪ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ನಡೆದಿದೆ.
ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಭರತ್ ಕಂಪನಿಗೆ ಸೇರಿದ ಖಾಸಗಿ ಸ್ಲೀಪರ್ ಕೋಚ್ ಬಸ್‌ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಚಾಲಕನ ಸಮಯಪ್ರಜ್ಞೆಯಿಂದ ಭಾರಿ ದುರಂತ ತಪ್ಪಿದೆ.
ಬಸ್‌ನ ಟೈರ್‌ಗೆ ಬೆಂಕಿ ಹತ್ತಿಕೊಂಡಿರುವುದನ್ನು ಗಮನಿಸಿದ ಚಾಲಕ ತಕ್ಷಣವೇ ವಾಹನವನ್ನು ರಸ್ತೆ ಬದಿಗೆ ನಿಲ್ಲಿಸಿ, ನಿದ್ದೆಯ ಮಂಪರಿನಲ್ಲಿದ್ದ ಪ್ರಯಾಣಿಕರನ್ನು ಎಚ್ಚರಿಸಿ ಹೊರಗೆ ಕರೆದೊಯ್ದಿದ್ದಾನೆ. ಪರಿಣಾಮ, ಬಸ್‌ನಲ್ಲಿದ್ದ 36 ಪ್ರಯಾಣಿಕರು ಸುರಕ್ಷಿತವಾಗಿ ಪಾರಾಗಿದ್ದಾರೆ.
ನೋಡು ನೋಡುತ್ತಿದ್ದಂತೆಯೇ ಬೆಂಕಿ ಬಸ್‌ನ್ನೆಲ್ಲ ಆವರಿಸಿಕೊಂಡಿದ್ದು, ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ. ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸಪಟ್ಟರು. ಘಟನೆ ಸಂಬಂಧ ಶಾಂತಿಗ್ರಾಮ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಬೆಂಕಿ ಅವಘಡಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ.
ಇದನ್ನೂ ಓದಿ : ನೀರಿನ ಸಮಸ್ಯೆ : ಕೆಎಸ್ಆರ್‌ಟಿಸಿ ಬಸ್ ನಿಲ್ದಾಣದ ಶೌಚಾಲಯ ಬಂದ್


















