ಹಾಸನ : ಹಾಸನದ ಅಧಿದೇವತೆ ಶ್ರೀ ಹಾಸನಾಂಬ ಮತ್ತು ಶ್ರೀ ಸಿದ್ದೇಶ್ವರ ಸ್ವಾಮಿ ಜಾತ್ರಾ ಮಹೋತ್ಸವ ಗುರುವಾರದಿಂದ (ಅ.9) ಆರಂಭವಾಗಲಿದ್ದು, ಈ ಹಿನ್ನೆಲೆ ಜಿಲ್ಲಾಡಳಿತ ಸಕಲ ಸಿದ್ಧತೆ ಕೈಗೊಂಡಿದೆ.
ವರ್ಷಕ್ಕೊಮ್ಮೆ ಮಾತ್ರ ಭಕ್ತರಿಗೆ ದರ್ಶನ ನೀಡುವ ಹಾಸನಾಂಬೆಯ ದರ್ಶನೋತ್ಸವ ಈ ಬಾರಿ ಅಕ್ಟೋಬರ್ 9ರಿಂದ 23ರವರೆಗೆ ನಡೆಯಲಿದೆ. ಅ.10ರಿಂದ 22ರ ತನಕ ಸಾರ್ವಜನಿಕರಿಗೆ ದರ್ಶನಕ್ಕೆ ಅವಕಾಶವಿರಲಿದೆ. ಈ ಬಾರಿ ರಾಜ್ಯ ಸೇರಿ ದೇಶದ ವಿವಿಧ ಭಾಗಗಳಿಂದ 25 ಲಕ್ಷಕ್ಕೂ ಹೆಚ್ಚು ಭಕ್ತರು ದೇವಿಯ ದರ್ಶನಕ್ಕೆ ಬರುವ ನಿರೀಕ್ಷೆ ಇದ್ದು, ಜಿಲ್ಲಾಡಳಿತ ಅಗತ್ಯ ಕ್ರಮ ಕೈಗೊಂಡಿದೆ.
ಹಾಸನಾಂಬ ದರ್ಶನೋತ್ಸವ ಹಿನ್ನೆಲೆಯಲ್ಲಿ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಅವರು ಬುಧವಾರ ದೇವಸ್ಥಾನದಲ್ಲಿ ಸಿದ್ಧತೆ ಪರಿಶೀಲಿಸಿದ್ದಾರೆ.
ಈ ವೇಳೆ ಮಾತನಾಡಿರುವ ಅವರು, ಹಾಸನಾಂಬ ದರ್ಶನೋತ್ಸವಕ್ಕೆ ಈ ಬಾರಿ 25 ಲಕ್ಷಕ್ಕೂ ಹೆಚ್ಚು ಮಂದಿ ಬರುವ ನಿರೀಕ್ಷೆ ಇದ್ದು, ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ದೇವಿ ದರ್ಶನಕ್ಕೆ 80 ವರ್ಷಕ್ಕಿಂತ ಮೇಲಿನವರು ಹಾಗೂ ಅಂಗವಿಕಲರಿಗೆ ನೇರದರ್ಶನ ವ್ಯವಸ್ಥೆ ಮಾಡಲಾಗಿದೆ. ಗಂಟೆಗೆ 6 ಸಾವಿರ ಮಂದಿಯಂತೆ ಪ್ರತಿದಿನ ಒಂದೂವರೆ ಲಕ್ಷಕ್ಕೂ ಹೆಚ್ಚು ಭಕ್ತರು ದೇವಿಯ ದರ್ಶನ ಪಡೆಯಲು ಅನುಕೂಲವಾಗುವಂತೆ ವ್ಯವಸ್ಥೆ ಮಾಡಲಾಗಿದೆ. ಈ ಬಾರಿ ವಿಐಪಿ, ವಿವಿಐಪಿ ಪಾಸ್ ರದ್ದುಪಡಿಸಿದ್ದು, ಶಿಷ್ಟಾಚಾರ ದರ್ಶನ ವ್ಯವಸ್ಥೆಯಲ್ಲಿಯೂ ಬದಲಾವಣೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.