ಹಾಸನ: ವರ್ಷಕ್ಕೊಮ್ಮೆ ಬಾಗಿಲು ತೆರೆಯುವ ಹಾಸನಾಂಬೆ ದೇಗುಲ ಬಾಗಿಲು ತೆರೆದಿದೆ. ಗುರುವಾರ ಮಧ್ಯಾಹ್ನ ದೇವಸ್ಥಾನದ ಬಾಗಿಲು ತೆರೆದಿದೆ.
ಅರಸು ವಂಶಸ್ಥರು ಬಾಳೆ ಗಿಡ ಕಡಿದ ನಂತರ ಬಾಗಿಲು ತೆರೆಯಲಾಯಿತು. ನವೆಂಬರ್ 3ರವರೆಗೆ ಜಾತ್ರಾ ಮಹೋತ್ಸವ ನಡೆಯಲಿದ್ದು, ನಾಳೆಯಿಂದ ನವೆಂಬರ್ 2 ರವರೆಗೆ ಭಕ್ತರಿಗೆ ದರ್ಶನಕ್ಕೆ ಅವಕಾಶ ನೀಡಲಾಗಿದೆ. ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷ ನಿರ್ಮಲಾನಂದನಾಥ ಸ್ವಾಮೀಜಿ, ತುಮಕೂರು ಸಿದ್ಧಗಂಗಾ ಮಠದ ಸಿದ್ದಲಿಂಗ ಸ್ವಾಮೀಜಿ, ಸಚಿವ ರಾಜಣ್ಣ, ಶಾಸಕ ಸ್ವರೂಪ್ ಪ್ರಕಾಶ್, ಸಂಸದ ಶ್ರೇಯಸ್ ಪಟೇಲ್, ಹಾಸನ ಡಿಸಿ, ಪೊಲೀಸ್ ವರಿಷ್ಠಾಧಿಕಾರಿ ಸಮ್ಮುಖದಲ್ಲಿ ದೇವಿಯ ಗರ್ಭಗುಡಿಯ ಬಾಗಿಲು ತೆರೆಯಲಾಯಿತು.
ಈಗಾಗಲೇ ಜಾತ್ರೆಗಾಗಿ ಭರದ ಸಿದ್ಧತೆ ನಡೆದಿದ್ದವು. ವಿಶೇಷ ಹೂವಿನ ಅಲಂಕಾರದಿಂದ ದೇವಸ್ಥಾನ ಕಂಗೊಳಿಸಲಾಗಿದೆ. ಹಾಸನಾಂಬ ದೇವಾಲಯದಲ್ಲಿ ಗರ್ಭಗುಡಿ ಬಾಗಿಲು ವರ್ಷದಲ್ಲಿ ಒಂದು ಬಾರಿ ಮಾತ್ರ ತೆರೆಯುವುದು ವಿಶಿಷ್ಟ ಸಂಪ್ರದಾಯವಾಗಿದೆ. ಪ್ರತೀ ವರ್ಷ ಅಶ್ವಯುಜ ಮಾಸದ ಅಷ್ಟಮಿಯ ದಿನ ಬಾಗಿಲು ತೆರೆಯುತ್ತದೆ.
ಈ ಸಮಯದಲ್ಲಿ ದೇವಿಯ ಆಶೀರ್ವಾದವನ್ನು ಪಡೆಯುವುದರಿಂದ ಬಾಳಿನಲ್ಲಿ ಸಮೃದ್ಧಿ ಮತ್ತು ಸಂತೋಷ ಉಂಟಾಗುತ್ತದೆ ಎಂಬುದು ಭಕ್ತರ ನಂಬಿಕೆಯಾಗಿದೆ. ಕಳೆದ ಬಾರಿ ಶಕ್ತಿ ಯೋಜನೆಯ ಪರಿಣಾಮ ಕಾರಣದಿಂದ ಭಾರೀ ಸಂಖ್ಯೆಯಲ್ಲಿ ಮಹಿಳೆಯರು ಹಾಗು ಭಕ್ತರು ಆಗಮಿಸಿದ್ದರು. ಬರೊಬ್ಬರಿ 14 ಲಕ್ಷಕ್ಕೂ ಅಧಿಕ ಭಕ್ತರು ದೇವಿಯ ದರ್ಶನ ಪಡೆದಿದ್ದರು.
ಹಾಸನಾಂಬ ದೇಗುಲದಲ್ಲಿ ಮುಂಜಾನೆ 6 ಗಂಟೆಯಿಂದ ಸಂಜೆ 6 ಗಂಟೆ ವರೆಗೆ ಸಾರ್ವಜನಿಕರಿಗೆ ದರ್ಶನಕ್ಕೆ ಅವಕಾಶ ನೀಡಲಾಗುತ್ತಿದೆ. ಈ ಬಾರಿ ಮುಂಜಾನೆ 6 ಗಂಟೆಯಿಂದ ಸಂಜೆ 6 ಗಂಟೆ ವರೆಗೆ ಮಾತ್ರವಲ್ಲದೆ, ನೈವೇದ್ಯದ ಸಮಯ ಹೊರತುಪಡಿಸಿ ಉಳಿದಂತೆ ಎಲ್ಲಾ ಅವಧಿಯಲ್ಲೂ ದರ್ಶನಕ್ಕೆ ಅವಕಾಶ ನೀಡಲಾಗಿದೆ.
ನೇರ ದರ್ಶನ ಪಡೆಯ ಬಯಸುವ ಭಕ್ತರಿಗೆ 1000 ರೂ. ಟಿಕೆಟ್ 300 ರೂ. ಟಿಕೆಟ್ ಹಾಗೂ ವಿಶೇಷ ಗಣ್ಯರ ದರ್ಶನಕ್ಕೆ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದೆ.