ಬೆಂಗಳೂರು: ಮೋಹಕ ತಾರೆ ನಟಿ ರಮ್ಯಾ ಅವರಿಗೆ ಡಿಬಾಸ್ ಫ್ಯಾನ್ಸ್ ಅಶ್ಲೀಲವಾಗಿ ಕಮೆಂಟ್ ಮಾಡಿರುವುದನ್ನು ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಖಂಡಿಸಿದ್ದಾರೆ. ರಮ್ಯಾ ಪರ ಶಿವಣ್ಣ ಮತ್ತು ಗೀತಾ ದಂಪತಿ ತಮ್ಮ ಅಧಿಕೃತ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ.
ರಮ್ಯಾ ಕೂಡ ಶಿವಣ್ಣ ಮಾಡಿರುವ ಪೋಸ್ಟನ್ನು ಶೇರ್ ಮಾಡಿಕೊಂಡಿದ್ದಾರೆ. ನಿನ್ನೆಯಷ್ಟೇ ಡಾ.ರಾಜ್ ಕುಟುಂಬದ ವಿನಯ್ ರಾಜ್ ಕುಮಾರ್ ರಮ್ಯಾಗೆ ಬೆಂಬಲ ವ್ಯಕ್ತಪಡಿಸಿದ್ದರು. ಇದೀಗ ಶಿವಣ್ಣ ದಂಪತಿ ಕೂಡ ರಮ್ಯಾ ಪರ ಬ್ಯಾಟ್ ಬೀಸಿದ್ದಾರೆ.
ಶಿವಣ್ಣನ ಪೋಸ್ಟ್ ನಲ್ಲಿ ಏನಿದೆ ?
ರಮ್ಯಾ ಅವರ ವಿರುದ್ಧ ಬಳಸಿರುವ ಪದಗಳು ಖಂಡನೀಯ. ಯಾವ ಮಹಿಳೆಯ ವಿರುದ್ಧವೂ ಆ ರೀತಿ ಮಾತನಾಡುವುದು ಸರಿಯಲ್ಲ; ಅದನ್ನು ನಾವು ಸಹಿಸಬಾರದು.
ಮಹಿಳೆಯರನ್ನು ತಾಯಿಯಾಗಿ, ಅಕ್ಕನಾಗಿ, ಮಗಳಾಗಿ, ಮಡದಿಯಾಗಿ ಮತ್ತು ಮೊಟ್ಟ ಮೊದಲು ಒಬ್ಬ ವ್ಯಕ್ತಿಯಾಗಿ ಗೌರವಿಸುವುದು ತುಂಬಾ ಮುಖ್ಯ.
ಸೋಶಿಯಲ್ ಮೀಡಿಯಾ ತುಂಬಾ ಬಲಿಷ್ಠವಾದ ಅಸ್ತ್ರ, ಅದನ್ನು ತಮ್ಮ ಏಳಿಗೆಗಾಗಿ ಬಳಸಬೇಕೇ ಹೊರತು, ಅವಾಚ್ಯ ಶಬ್ದಗಳಿಂದ ನಿಂದಿಸಿ, ದ್ವೇಷ- ಅಸೂಯೆಯನ್ನು ಬಿತ್ತಲು ಬಳಸಬಾರದು.
ನಿಮ್ಮ ನಿಲುವು ಸರಿಯಿದೆ, ರಮ್ಯಾ. ನಿಮ್ಮ ಜೊತೆಗೆ ನಾವು ಸದಾ ನಿಲ್ಲುತ್ತೇವೆ.
ಇಂತಿ,
ಶಿವರಾಜ್‌ಕುಮಾರ್
ಗೀತಾ ಶಿವರಾಜ್‌ಕುಮಾರ್
ದರ್ಶನ್ ಅವರ ಜಾಮೀನು ರದ್ದು ಕೋರಿ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿದೆ. ಅರ್ಜಿ ವಿಚಾರಣೆಯನ್ನು ಕೈಗೆತ್ತಿಕೊಂಡಿರುವ ಕೋರ್ಟ್, ವಾದ ಪ್ರತಿವಾದವನ್ನು ಪೂರ್ಣಗೊಳಿಸಿದ್ದು, ತೀರ್ಪನ್ನು ಕಾಯ್ದಿರಿಸಿದೆ. ವಿಚಾರಣೆ ನ್ಯಾಯಾಲಯವು ಪ್ರಕರಣಕ್ಕೆ ಸಂಬಂಧಿಸಿ ಕೆಲವು ವಿಚಾರಗಳನ್ನು ಪ್ರಸ್ತಾಪ ಮಾಡಿತ್ತು. ಸುಪ್ರೀಂ ಕೋರ್ಟ್ನ ಅಭಿಪ್ರಾಯ ಪ್ರಸ್ತಾಪಿಸಿ ರಮ್ಯಾ ಅವರು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಒಂದನ್ನು ಶೇರ್ ಮಾಡಿದ್ದರು.