ಬೆಂಗಳೂರು : ರಾಜ್ಯದ ಆರೋಗ್ಯ ಇಲಾಖೆಯ ಕಾರ್ಯವೈಖರಿಯ ಕುರಿತು ಬಿಜೆಪಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರ ನಿರ್ಲಕ್ಷ್ಯದಿಂದ ಆರೋಗ್ಯ ಇಲಾಖೆ ಐಸಿಯು ಸೇರಿದೆ ಎಂದು ಬಿಜೆಪಿ ಆರೋಪಿಸಿದೆ.
ಸರ್ಕಾರಿ ಆಸ್ಪತ್ರೆಗಳಲ್ಲಿ ಅಗತ್ಯ ಔಷಧಿಗಳು ಲಭ್ಯವಿಲ್ಲ. ರಾಜ್ಯದ ಬಹುತೇಕ ಜಿಲ್ಲಾಸ್ಪತ್ರೆಗಳಲ್ಲಿ ಸಿಟಿ ಸ್ಕ್ಯಾನ್ ಹಾಗೂ ಎಂಆರ್‌ಐ ಸ್ಕ್ಯಾನ್ ಸೇವೆಗಳು ಸ್ಥಗಿತಗೊಂಡಿವೆ. ಇದರಿಂದ ಬಡ ರೋಗಿಗಳು ಸಂಕಷ್ಟ ಅನುಭವಿಸುತ್ತಿದ್ದಾರೆ ಎಂದು ಬಿಜೆಪಿ ಸಾಮಾಜಿಕ ಜಾಲತಾಣವಾದ ತಮ್ಮ ಎಕ್ಸ್‌ನಲ್ಲಿ ಪೋಸ್ಟ್ ಮಾಡುವ ಮೂಲಕ ಆಕ್ರೋಶ ಹೊರಹಾಕಿದೆ.

ಸ್ಕ್ಯಾನಿಂಗ್ ಸೇವೆ ಒದಗಿಸುತ್ತಿರುವ ಖಾಸಗಿ ಕಂಪನಿಗೆ ಬಾಕಿ ಹಣ ಪಾವತಿಸಲು ಕಾಂಗ್ರೆಸ್ ಸರ್ಕಾರದ ಬಳಿ ಹಣವಿಲ್ಲದ ಪರಿಸ್ಥಿತಿ ಉಂಟಾಗಿದೆ ಎಂದು ಆರೋಪಿಸಿದೆ. ಕಳೆದ ಮೂರು–ನಾಲ್ಕು ದಿನಗಳಿಂದ ಹಲವಾರು ಜಿಲ್ಲಾಸ್ಪತ್ರೆಗಳಲ್ಲಿ ಸಿಟಿ ಹಾಗೂ ಎಂಆರ್‌ಐ ಸ್ಕ್ಯಾನ್ ಸೇವೆಗಳು ಬಂದ್ ಆಗಿದ್ದು, ರೋಗಿಗಳು ಪರದಾಡುವಂತಾಗಿದೆ ಎಂದು ದೂರಿದೆ.

ಈ ಕುರಿತು ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿರುವ ಬಿಜೆಪಿ, ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ತಕ್ಷಣ ಸ್ಕ್ಯಾನಿಂಗ್ ವ್ಯವಸ್ಥೆ ಸರಿಪಡಿಸಲು ಹಾಗೂ ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧಿ ಕೊರತೆ ನಿವಾರಣೆಗೆ ಕ್ರಮ ಕೈಗೊಳ್ಳಬೇಕು. ಬಡ ರೋಗಿಗಳಿಗೆ ಅನುಕೂಲವಾಗುವಂತೆ ತುರ್ತು ಕ್ರಮ ವಹಿಸಬೇಕು ಎಂದು ಆಗ್ರಹಿಸಿದೆ.
ಇದನ್ನೂ ಓದಿ : ಅಪರೂಪದ ಮದುವೆಗೆ ಸಾಕ್ಷಿಯಾದ ಕೊಪ್ಪಳದ ಭಾಗ್ಯನಗರ | ಅಂಧ ವಧುವನ್ನು ವರಿಸಿದ ವರ



















