ಬೆಂಗಳೂರು : ರಾಜ್ಯ ಸರ್ಕಾರದ ಆರೋಗ್ಯ ಇಲಾಖೆಯ ಕಾರ್ಯಕ್ರಮದಲ್ಲಿ ಕನ್ನಡಕ್ಕೆ ಆದ್ಯತೆ ನೀಡಿಲ್ಲವೆಂಬ ಆರೋಪ ಕೇಳಿಬಂದಿದ್ದು, ಆಹ್ವಾನ ಪತ್ರಿಕೆ ಉರ್ದು ಭಾಷೆಯಲ್ಲಿ ಮುದ್ರಣಗೊಂಡಿರುವುದು ವಿವಾದಕ್ಕೆ ಕಾರಣವಾಗಿದೆ.
ರೋಗ ನಿರೋಧಕ ಚಿಕಿತ್ಸೆ ಹಾಗೂ ಉಚಿತ ಆಂಬುಲೆನ್ಸ್ ಸೇವೆಗೆ ಚಾಲನೆ ನೀಡುವ ಸರ್ಕಾರಿ ಕಾರ್ಯಕ್ರಮದಲ್ಲಿ ಕನ್ನಡದ ಬದಲು ಉರ್ದು ಭಾಷೆಯಲ್ಲಿ ಆಹ್ವಾನ ಪತ್ರಿಕೆ ಪ್ರಕಟಿಸಿರುವುದು ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.

ರಾಜ್ಯದಲ್ಲಿ ನಡೆಯುವ ಸರ್ಕಾರಿ ಕಾರ್ಯಕ್ರಮಗಳಲ್ಲಿ ಕನ್ನಡಕ್ಕೆ ಮೊದಲ ಆದ್ಯತೆ ನೀಡುವುದು ಪರಿಪಾಠವಾಗಿರುವ ಹಿನ್ನೆಲೆ, ಈ ಬೆಳವಣಿಗೆಗೆ ವಿವಿಧ ಸಂಘಟನೆಗಳು ಹಾಗೂ ಕನ್ನಡಪರ ಹೋರಾಟಗಾರರಿಂದ ಆಕ್ಷೇಪ ವ್ಯಕ್ತವಾಗಿದೆ.
ಕೇಂದ್ರ ಸರ್ಕಾರದ ವಿರುದ್ಧ ಭಾಷಾ ವಿಚಾರದಲ್ಲಿ ಟೀಕೆ ಮಾಡುತ್ತಿರುವ ರಾಜ್ಯ ಸರ್ಕಾರವೇ ತನ್ನ ಕಾರ್ಯಕ್ರಮದಲ್ಲಿ ಕನ್ನಡವನ್ನು ಕಡೆಗಣಿಸಿದೆ ಎಂಬ ಆರೋಪವೂ ಕೇಳಿಬಂದಿದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಆರೋಗ್ಯ ಇಲಾಖೆ ಇನ್ನೂ ಅಧಿಕೃತ ಸ್ಪಷ್ಟನೆ ನೀಡಿಲ್ಲ. ವಿವಾದಾತ್ಮಕ ಆಹ್ವಾನ ಪತ್ರಿಕೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಭಾರೀ ಚರ್ಚೆಗೆ ಕಾರಣವಾಗಿದೆ.
ಇದನ್ನೂ ಓದಿ : ದಾವಣಗೆರೆ ದುರ್ಗಾಂಭಿಕಾ ದೇವಿ ಜಾತ್ರೆಯಲ್ಲಿ ಕಿಡಿಗೇಡಿಗಳ ಅಟ್ಟಾಹಾಸ | ಸಿಕ್ಕಸಿಕ್ಕವರ ಮೇಲೆ ಹಲ್ಲೆ ಮಾಡಿದ ಯುವಕರು!



















