ಬೆಂಗಳೂರು: ಕಳೆದ ಕೆಲವು ದಿನಗಳಿಂದ ರಾಜ್ಯದ ಹಲವೆಡೆ ಮುಂಗಾರು ಪೂರ್ವ ಮಳೆಯಾಗುತ್ತಿದ್ದು, ಮುಂದಿನ ಕೆಲವು ದಿನ ಕರಾವಳಿ ಹಾಗೂ ಒಳನಾಡಿನ ಕೆಲವೆಡೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಲಘು ಮಳೆ ಮತ್ತು ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ಸೂಚಿಸಿದೆ. ಉತ್ತರ-ದಕ್ಷಿಣ ಟ್ರೋಫ್ ರಚನೆಯಾಗುತ್ತಿದ್ದು, ಸಮುದ್ರ ಮಟ್ಟದಿಂದ ಸರಾಸರಿ 0.9 ಕಿ.ಮೀ ಎತ್ತರದಲ್ಲಿ ಮಹಾರಾಷ್ಟ್ರ ಮತ್ತು ಕರ್ನಾಟಕದ ಮೂಲಕ ಹಾದುಹೋಗುತ್ತದೆ. ಹೀಗಾಗಿ ರಾಜ್ಯದ ಅಲ್ಲಲ್ಲಿ ಮಳೆಯಾಗುತ್ತಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದ್ದು, ಕೊಡಗು, ಹಾಸನ, ಚಿಕ್ಕಮಗಳೂರು ಮತ್ತು ಶಿವಮೊಗ್ಗದಲ್ಲಿ ಪ್ರತ್ಯೇಕ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನಲ್ಲಿ ಮುಂದಿನ 24 ಗಂಟೆಗಳ ಕಾಲ ತಾಪಮಾನ ಸ್ಥಿರವಾಗಿರುತ್ತದೆ. ಆದರೆ ನಂತರ 2-4 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗುವ ಸಾಧ್ಯತೆಯಿದೆ. ಕರಾವಳಿ ಕರ್ನಾಟಕದ ತಾಪಮಾನ 5 ದಿನಗಳವರೆಗೆ ಸ್ಥಿರವಾಗಿರುತ್ತದೆ ಎನ್ನಲಾಗಿದೆ.