ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಕಳೆದ ಕೆಲವು ದಿನಗಳಿಂದ ಮಳೆರಾಯ ಅಬ್ಬರಿಸುತ್ತಿದ್ದು, ಹಲವೆಡೆ ಜನ – ಜೀವನ ಅಸ್ತವ್ಯಸ್ಥಗೊಂಡಿದೆ. ರಾಜ್ಯದ ಕರಾವಳಿ ಸೇರಿದಂತೆ 23 ಜಿಲ್ಲೆಗಳಲ್ಲಿ ಮುಂದಿನ 48 ಗಂಟೆಗಳ ಕಾಲ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಸಿಲಿಕಾನ್ ಸಿಟಿಯಲ್ಲಿ ಕೂಡ ಉತ್ತಮ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಆ. 10ರ ವರೆಗೆ ಮಳೆಯಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಧಾರವಾಡ, ಗದಗ, ಹಾವೇರಿ, ಬಳ್ಳಾರಿ, ಚಿಕ್ಕಮಗಳೂರು, ಚಿತ್ರದುರ್ಗ, ಶಿವಮೊಗ್ಗ, ತುಮಕೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ವಿಜಯನಗರ, ಕೋಲಾರ, ಹಾಸನ, ದಾವಣಗೆರೆ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ವಿಜಯನಗರ, ರಾಯಚೂರು, ಕೊಪ್ಪಳ, ಕಲಬುರಗಿ, ಬೀದರ್ಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.


















