ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುತ್ತಿದೆ. ಹೀಗಾಗಿ ಹಲವೆಡೆ ಜನ – ಜೀವನ ಅಸ್ತವ್ಯಸ್ಥಗೊಂಡಿದೆ. ಉತ್ತರ ಕನ್ನಡ (Uttara Kannada) ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ದಾಂಡೇಲಿ ಮತ್ತು ಜೋಯಿಡಾ ತಾಲೂಕುಗಳ ಶಾಲೆಗಳಿಗೆ ಗುರುವಾರ ರಜೆ ಘೋಷಿಸಲಾಗಿದೆ.
ಎರಡೂ ತಾಲೂಕುಗಳಲ್ಲಿನ ಅಂಗನವಾಡಿ ಹಾಗೂ ಶಾಲೆಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಲಕ್ಷ್ಮೀ ಪ್ರಿಯಾ ಆದೇಶ ನೀಡಿದ್ದಾರೆ ಗುರುವಾರ ಜಿಲ್ಲೆಯಾದ್ಯಂತ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಜಿಲ್ಲೆಯಲ್ಲಿ ಗಾಳಿ ಸಹಿತ ಹೆಚ್ಚಿನ ಮಳೆಯಾಗುತಿದ್ದು, ಗುರುವಾರ ಕೂಡ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಮುಂಜಾಗೃತ ಕ್ರಮವಾಗಿ ರಜೆ ಘೋಷಿಸಲಾಗಿದೆ.
ಕೊಡಗು (Kodagu) ಜಿಲ್ಲೆಯಲ್ಲಿ ಮಳೆ ಮುಂದುವರೆದ ಹಿನ್ನೆಲೆಯಲ್ಲಿ ಗುರುವಾರ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜಿಗೆ ರಜೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ವೆಂಕಟರಾಜ ಅವರು ಆದೇಶಿಸಿದ್ದಾರೆ