ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.
ಅಂಗನವಾಡಿಯಿಂದ ಪ್ರೌಢ ಶಾಲೆಯವರೆಗೂ ಜೂನ್ 27ರಂದು ರಜೆ ಘೋಷಿಸಲಾಗಿದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ಕೂಡ ನೀಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಜೂನ್ 25 ರಿಂದ ಇಲ್ಲಿಯವರೆಗೆ ಹಗಲು- ರಾತ್ರಿ ಮಳೆಯಾಗುತ್ತಿದೆ. ಹೀಗಾಗಿ ಜಿಲ್ಲೆಯಲ್ಲಿ ಜನ- ಜೀವನ ಅಸ್ತವ್ಯಸ್ಥವಾಗಿದೆ. ಇಂದು ರಾತ್ರಿ ಹಾಗೂ ನಾಳೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಧಿಕಾರಿಗಳು, ನಾಳೆ ಶಾಲೆಗಳಿಗೆ ರಜೆ ನೀಡಿದ್ದಾರೆ.
ಐದು ಜಿಲ್ಲೆಗಳಲ್ಲಿ ಮುಂದಿನ 3 ಗಂಟೆ ಭಾರಿ ಮಳೆಯ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಕೊಡಗು, ಮೈಸೂರು ಮತ್ತು ಹಾವೇರಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಸಿಡಿಲು- ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಕನ್ನಡ ಅಷ್ಟೇ ಅಲ್ಲದೇ, ಕರಾವಳಿ ಭಾಗದ ಉಡುಪಿಯಲ್ಲೂ ಭರ್ಜರಿ ಮಳೆಯಾಗಿದೆ. ಕೊಡಗು, ಚಿಕ್ಕಮಗಳೂರು, ಕಾರವಾರ ಸೇರಿ ವಿವಿಧೆಡೆ ಮಂಗಳವಾರ ತಡರಾತ್ರಿ ಭಾರೀ ಮಳೆಯಾಗಿದೆ. ಮಲೆನಾಡು ಜಿಲ್ಲೆಗಳು ಕೂಡ ಮಳೆಯಿಂದಾಗಿ ಅಸ್ತವ್ಯಸ್ಥಗೊಂಡಿವೆ.