ಬೆಂಗಳೂರು, ಆಗಸ್ಟ್ 4 : ರಾಜ್ಯದ ಹಲವೆಡೆ ಭಾರೀ ಮಳೆ ಮುಂದುವರಿದಿದ್ದು, ನದಿಗಳು ಹಾಗೂ ಜಲಾಶಯಗಳು ಅಪಾಯದ ಮಟ್ಟದಲ್ಲಿ ತುಂಬಿ ಹರಿಯುತ್ತಿವೆ. ಕರಾವಳಿ ಜಿಲ್ಲೆಗಳಲ್ಲಿ ಇಂದು ಕೂಡ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಮಳೆಯ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.
ದಕ್ಷಿಣ ಕನ್ನಡದಲ್ಲಿ ಶಾಲೆಗಳಿಗೆ ರಜೆ
ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ. ಅವರು ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲೆಯ ಹಲವು ತಾಲೂಕುಗಳ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ಘೋಷಿಸಿ ಆದೇಶ ಹೊರಡಿಸಿದ್ದಾರೆ. ಮಂಗಳೂರು, ಉಳ್ಳಾಲ, ಮೂಡಬಿದ್ರೆ, ಬಂಟ್ವಾಳ ಹಾಗೂ ಮುಲ್ಕಿ ತಾಲೂಕುಗಳಲ್ಲಿ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ನೀಡಲಾಗಿದೆ.
ಇನ್ನು ಪುತ್ತೂರು, ಬೆಳ್ತಂಗಡಿ, ಕಡಬ ಹಾಗೂ ಸುಳ್ಯ ತಾಲೂಕುಗಳಲ್ಲಿ ಅಂಗನವಾಡಿಯಿಂದ ದ್ವಿತೀಯ ಪಿಯುಸಿವರೆಗೆ ಸಂಪೂರ್ಣ ರಜೆ ಘೋಷಿಸಲಾಗಿದೆ. ಐಟಿಐ ಹಾಗೂ ಡಿಪ್ಲೊಮಾ ಕಾಲೇಜುಗಳಿಗೂ ರಜೆ ಅನ್ವಯವಾಗಲಿದೆ.
ಉಡುಪಿಯಲ್ಲೂ ಶಾಲೆಗಳಿಗೆ ರಜೆ
ಉಡುಪಿ ಜಿಲ್ಲೆಯಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಹಾಗೂ ಯೆಲ್ಲೋ ಅಲರ್ಟ್ ಘೋಷಣೆಯಾಗಿರುವ ಹಿನ್ನೆಲೆ ಜಿಲ್ಲಾಧಿಕಾರಿ ಸ್ವರೂಪ್ ಟಿ.ಕೆ. ಅವರು ಜಿಲ್ಲೆಯ ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ಘೋಷಿಸಿದ್ದಾರೆ. ಆದರೆ ಪದವಿ ಪೂರ್ವ ಕಾಲೇಜುಗಳಿಗೆ ರಜೆ ಇರುವುದಿಲ್ಲ. ಐಟಿಐ, ಡಿಪ್ಲೊಮಾ, ಪದವಿ ಹಾಗೂ ಸ್ನಾತಕೋತ್ತರ ತರಗತಿಗಳು ಎಂದಿನಂತೆ ನಡೆಯಲಿವೆ.
ಎಂಜಿನಿಯರಿಂಗ್ ಕಾಲೇಜುಗಳಿಗೂ ರಜೆ ಇರುವುದಿಲ್ಲ ಎಂದು ಉಡುಪಿ ಜಿಲ್ಲಾಡಳಿತ ಸ್ಪಷ್ಟಪಡಿಸಿದೆ. ಭಾರೀ ಮಳೆಯ ಹಿನ್ನೆಲೆಯಲ್ಲಿ ನದಿಗಳು, ಜಲಾಶಯಗಳ ನೀರಿನ ಮಟ್ಟದ ಮೇಲೆ ಜಿಲ್ಲಾಡಳಿತಗಳು ನಿಗಾ ವಹಿಸಿದ್ದು, ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳು ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.
ಇದನ್ನೂ ಓದಿ : ಜುಲೈನಲ್ಲಿ ನಿಸ್ಸಾನ್ ಕಾರುಗಳ ಮಾರಾಟ 3 ಪಟ್ಟು ಹೆಚ್ಚಳ!



















