ಬೆಂಗಳೂರು: ರಾಜ್ಯದ ಕೆಲವೆಡೆ ಭಾರೀ ಮಳೆಯಾಗಿರುವ ಕುರಿತು ವರದಿಯಾಗಿದ್ದು, ಬಿಸಿಲಿನ ಮಧ್ಯೆ ಹಲವೆಡೆ ತಂಪಿನ ವಾತಾವರಣ ನಿರ್ಮಾಣವಾಗಿದೆ. ಮುಂಗಾರು ಪೂರ್ವ ಮಳೆ ಹಲವು ನಗರಗಳನ್ನು ತಂಪಾಗಿರಿಸಿದೆ.
ರಾಜ್ಯದ ಕೆಲವೆಡೆ ಬುಧವಾರ ರಾತ್ರಿ ಏಕಾಏಕಿ (Karnataka Rains) ಮಳೆಯಾಗಿದೆ. ಪರಿಣಾಮವಾಗಿ ಇಳೆ ತುಸು ತಂಪಾಗಿದೆ. ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯಲ್ಲಿ ಗುಡುಗು, ಸಿಡಿಲು ಸಹಿತ ಭಾರೀ ಮಳೆಯಾಗಿದೆ. ಹೀಗಾಗಿ ಮಂಗಳೂರಿಗೆ (Mangalore) ಬರುವ ವಿಮಾನಗಳನ್ನು ಡೈವರ್ಟ್ ಮಾಡಲಾಗಿದೆ. ಗುಡುಗು- ಸಿಡಿಲಿನ ಭಾರೀ ಮಳೆಯಿಂದಾಗಿ ಹಲವೆಡೆ ಜನ – ಜೀವನ ಅಸ್ತವ್ಯಸ್ಥಗೊಂಡಿದೆ.
ಹಾಸನ ಜಿಲ್ಲೆಯಲ್ಲಿ ಕೂಡ ಗಾಳಿ- ಮಳೆಯಾಗಿದೆ. ತುಮಕೂರಿನಲ್ಲೂ ಗುಡುಗು, ಗಾಳಿ ಸಹಿತ ಮಳೆಯಾಗಿದೆ. ಇಂದು ಕೂಡ ಬೆಂಗಳೂರಿಗೆ ಸಾಧಾರಣ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ಭಾರೀ ಬಿಸಿಲಿನಿಂದ ಕಂಗಾಲಾಗಿದ್ದ ಚಿಕ್ಕಮಗಳೂರು ಜಿಲ್ಲೆಯಲ್ಲಿ ಕೂಡ ಬುಧವಾರ ಸಂಜೆ ವರ್ಷಧಾರೆ ಸುರಿದಿದ್ದು, ತಂಪೆರೆದಿದೆ. ಮೂಡಿಗೆರೆ, ಕಳಸ, ಎನ್ಆರ್ ಪುರ ತಾಲೂಕಿನ ಹಲವೆಡೆ ವ್ಯಾಪಕ ಮಳೆಯಾಗಿದೆ.
ಬೆಂಗಳೂರು ಅಷ್ಟೇ ಅಲ್ಲದೇ, ಕೋಲಾರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ತುಮಕೂರು, ರಾಮನಗರ, ಮಂಡ್ಯ, ಮೈಸೂರು, ಚಾಮರಾಜನಗರ, ಕೊಡಗು ಮತ್ತು ಹಾಸನದಲ್ಲಿ ಕೆಲವು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ ಮತ್ತು ಉಡುಪಿ ಸೇರಿದಂತೆ ಕರಾವಳಿ ಕರ್ನಾಟಕದ ಕೆಲವು ಭಾಗಗಳಲ್ಲಿ ಮತ್ತೆ ಮಳೆಯಾಗುವ ಸಾಧ್ಯತೆ ಇದೆ. ಇನ್ನುಳಿದಂತೆ ರಾಜ್ಯದ ಹಲವೆಡೆ ಉಳಿದೆಡೆ ಒಣಹವೆ ಮುಂದುವರೆಯಲಿದೆ.