ರಾಜ್ಯದಲ್ಲಿ ಸಾಕಷ್ಟು ಅವಾಂತರ ಸೃಷ್ಟಿ ಮಾಡಿರುವ ಮಳೆರಾಯ ಇತ್ತೀಚೆಗೆ ವಿಶ್ರಾಂತಿ ಪಡೆದಿದ್ದ. ಈಗ ಮತ್ತೆ ಅಬ್ಬರಿಸುವ ಲಕ್ಷಣ ಗೋಚರಿಸಿದ್ದು, ರೈತರು, ಸಾರ್ವಜನಿಕರು ಆತಂಕ ವ್ಯಕ್ತಪಡಿಸುತ್ತಿದ್ದಾರೆ.
ನಗರದ ಜನರಿಗೆ ಈಗಾಗಲೇ ಮಳೆಯಿಂದಾಗಿ ಸಾಂಕ್ರಾಮಿಕ ರೋಗಗಳು ಕಾಡುತ್ತಿವೆ. ಈ ಮಧ್ಯೆಯೂ 72 ಗಂಟೆಗಳ ಕಾಲ ರಾಜ್ಯದ ಹಲವೆಡೆ ಮಳೆರಾಯ ಅಬ್ಬರಿಸಲಿದ್ದಾನೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಹೀಗಾಗಿ ಕೈಗೆ ಬಂದ ಬೆಳೆ ಉಳಿಸಿಕೊಳ್ಳಲು ರೈತರು ಪರದಾಡುವಂತಾಗಿದೆ. ರಾಜ್ಯದ 6 ಜಿಲ್ಲೆಗಳಲ್ಲಿ ಮಳೆರಾಯ ಹೆಚ್ಚು ಅಬ್ಬರಿಸಲಿದ್ದಾನೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ನವೆಂಬರ್ 9 ರಿಂದಲೇ ಒಟ್ಟು 3 ದಿನಗಳ ಕಾಲ ಭಾರಿ ಮಳೆ ಬೀಳಲಿದೆ ಎಂದು ಎಚ್ಚರಿಕೆ ನೀಡಲಾಗಿದೆ. ಮೈಸೂರು, ಕೋಲಾರ, ಕೊಡಗು, ಚಿಕ್ಕಮಗಳೂರು, ಚಾಮರಾಜನಗರ ಜಿಲ್ಲೆಗಳಲ್ಲಿ ಭಾರಿ ಮಳೆ ಸುರಿಯುವ ಮುನ್ಸೂಚನೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಇನ್ನುಳಿದಂತೆ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಜಿಲ್ಲೆಗೂ ಭಾರಿ ಮಳೆ ಸುರಿಯುವ ಮುನ್ಸೂಚನೆ ನೀಡಲಾಗಿದೆ. ಚಿತ್ರದುರ್ಗ, ದಾವಣಗೆರೆ, ಹಾಸನ, ಮಂಡ್ಯ, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.