ಕಲಬುರಗಿ: ಬೀದರ್, ಯಾದಗಿರಿ, ರಾಯಚೂರು ನಲ್ಲಿ ಭಾರೀ ಮಳೆ ಮತ್ತು ಪ್ರವಾಹದ ಹಿನ್ನಲೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವೈಮಾನಿಕ ಸಮೀಕ್ಷೆ ನಡೆಸಿದರು.
ಈಗಾಗಲೇ ಮುಖ್ಯಮಂತ್ರಿ ಮೊದಲ ಹಂತದ ವೈಮಾನಿಕ ಸಮೀಕ್ಷೆ ನಡೆಸಿದ್ದು, ಸಚಿವ ಎಂ ಬಿ ಪಾಟೀಲ್. ಪ್ರಿಯಾಂಕ್ ಖರ್ಗೆ. ಕೃಷ್ಣ ಬೈರೇಗೌಡ ಸಾಥ ನೀಡಿದರು. ಸಮೀಕ್ಷೆ ಬಳಿಕ ಜಿಲ್ಲಾಧಿಕಾರಿಗಳು ಮತ್ತು ಉಸ್ತುವಾರಿ ಕಾರ್ಯದರ್ಶಿಗಳ ಜೊತೆ ಪ್ರಾಥಮಿಕ ಸಭೆ ನಡೆಸಿ, ವಿವರವಾದ ಮಾಹಿತಿ ಪಡೆದುಕೊಂಡಿದ್ದಾರೆ
ಒಂದು ವಾರದಿಂದ ಉತ್ತರ ಕರ್ನಾಟಕ ಭಾಗದಲ್ಲಿ ಮಳೆಯ ಅವಾಂತರ ಜೋರಾಗಿದ್ದು ಕಲ್ಯಾಣ ಕರ್ನಾಟಕ ಭಾಗದಲ್ಲಿ, ಮನೆಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಠಿಸಿದೆ
ಮಹಾರಾಷ್ಟ್ರದಲ್ಲಿ ನಿರಂತರ ಸುರಿಯುತ್ತಿರುವ ಮಳೆಗೆ ಜನರ ಬದುಕೇ ಕೊಚ್ಚಿ ಹೋಗುತ್ತಿದೆ.. ಭೀಮಾನದಿ ತೀರದಲ್ಲಿರುವ ಹಳ್ಳಿಗಳು ಜಲಾವೃತ್ತವಾಗಿದ್ದು, ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ ನಿಭಾಯಿಸಲು ತುರ್ತು ಕ್ರಮಕೈಗೊಳ್ಳುವಂತೆ ಸಿಎಂ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಡಿಸಿ ಮತ್ತು ಜಿಲ್ಲಾ ಸಿಇಒಗಳು ಪ್ರವಾಹ ಪೀಡಿತ ಪ್ರದೇಶಗಳಿಗೆ ಖುದ್ದು ಭೇಟಿ ನೀಡಿ ತುರ್ತು ಕ್ರಮ ಕೈಗೊಳ್ಳಬೇಕು. ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ತಕ್ಷಣ ಜಿಲ್ಲೆಗೆ ಭೇಟಿ ನೀಡಬೇಕು. ಪರಿಸ್ಥಿತಿ ಅವಲೋಕಿಸಿ ಅಗತ್ಯ ಕ್ರಮಕೈಗೊಳ್ಳಲು ಜಿಲ್ಲಾಡಳಿತಕ್ಕೆ ಸೂಚನೆಗಳನ್ನು ನೀಡಬೇಕು ಎಂದಿದ್ದಾರೆ.
ಗ್ರಾಮೀಣಾಭಿವೃದ್ಧಿ ಇಲಾಖೆ ಕಾರ್ಯದರ್ಶಿಗಳು, ಜಲ ಸಂಪನ್ಮೂಲ ಇಲಾಖೆಯ ಮುಖ್ಯಕಾರ್ಯದರ್ಶಿಗಳು ಸ್ಥಳಕ್ಕೆ ಭೇಟಿ ನೀಡಬೇಕು. ಮಾನವ ಮತ್ತು ಜಾನವಾರುಗಳ ಪ್ರಾಣ ಹಾನಿ ಆಗದಂತೆ ಎಚ್ಚರಿಕಾ ಕ್ರಮ ಕೈಗೊಳ್ಳಬೇಕು. ಸಂತ್ರಸ್ಥರಿಗೆ ಆಹಾರ ಕೇಂದ್ರಗಳು, ಜಾನವಾರುಗಳಿಗೆ ಅಗತ್ಯ ಮೇವಿನ ವ್ಯವಸ್ಥೆ ಕಲ್ಪಿಸುವಂತೆ ಸೂಚನೆ ನೀಡಲಾಗಿದೆ.
ಇನ್ನು ಕಲಬುರಗಿ ಜಿಲ್ಲೆಯಲ್ಲಿ ಭಾರೀ ಮಳೆಯಿಂದ ಸಮಸ್ಯೆ ಉಂಟಾಗಿದೆ. ಕೃಷ್ಣ ನದಿಗೆ ಮಹಾರಾಷ್ಟ್ರದ ಉಜನಿ ಹಾಗೂ ನೀರಾ ಡ್ಯಾಂನಿಂದ ಹೆಚ್ಚಿನ ಪ್ರಮಾಣದ ನೀರು ಹೊರಕ್ಕೆ ಬಿಡಲಾಗಿದೆ. ಇದರಿಂದಾಗಿ ಭೀಮಾ ನದಿ ತೀರದಲ್ಲಿ ಹಾಗೂ ಬೆಣ್ಣೆ ತೋರಾದಲ್ಲಿ ಪ್ರವಾಹದ ಪರಿಸ್ಥಿತಿ ಉದ್ಭವಿಸಿರುವ ಕಾರಣ ಪರಿಸ್ಥಿತಿಯ ಮೇಲೆ ತೀವ್ರ ನಿಗಾವಹಿಸಿ, ಅಗತ್ಯ ರಕ್ಷಣಾ ಮತ್ತು ಪರಿಹಾರ ಕಾರ್ಯಗಳನ್ನು ಕೈಗೊಳ್ಳುವಂತೆ ಕಂದಾಯ ಸಚಿವ ಕೃಷ್ಣಬೈರೇಗೌಡ ಮತ್ತು ಸಿಎಸ್ ಶಾಲಿನಿ ರಜನೀಶ್ ಹಾಗೂ ಕಲಬುರಗಿ ಡಿಸಿಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.