ಬೆಂಗಳೂರು : ಕಳೆದ ಕೆಲ ದಿನಗಳಿಂದ ರಾಜ್ಯದಲ್ಲಿ ಕೈಕೊಟ್ಟಿದ್ದ ವರುಣ ಮತ್ತೆ ಚುರುಕಾಗಿದ್ದು, ಶನಿವಾರ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆಯಾಗಿದೆ. ಮುಂದಿನ ಐದು ದಿನಗಳ ಕಾಲ ರಾಜ್ಯದ ಹಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಕೇಂದ್ರ ಹಾಗೂ ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿವೆ. ಕೆಲವೆಡೆ ಜೋರಾದ ಗಾಳಿ, ಗುಡುಗು ಮತ್ತು ಸಿಡಿಲಿನೊಂದಿಗೆ ಮಳೆಯಾಗುವ ಸಾಧ್ಯತೆಯೂ ಇದೆ.
ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಭಾರಿ ಮಳೆಯಾಗುವ ಸಾಧ್ಯತೆ ಇರುವುದರಿಂದ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಕರಾವಳಿ ತೀರದಲ್ಲಿ ಬಿರುಗಾಳಿಯ ವೇಗ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಮುನ್ನೆಚ್ಚರಿಕೆ ನೀಡಲಾಗಿದೆ.
ಮಲೆನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಹಾಗೂ ದಕ್ಷಿಣ ಒಳನಾಡಿನ ಬೆಳಗಾವಿ, ಬಾಗಲಕೋಟೆ, ಬೀದರ್, ಕಲಬುರಗಿ, ಕೊಪ್ಪಳ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಗಂಟೆಗೆ 30 ರಿಂದ 40 ಕಿಲೋಮೀಟರ್ ವೇಗದಲ್ಲಿ ಬಲವಾದ ಗಾಳಿ ಬೀಸುವ ಸಾಧ್ಯತೆ ಇದ್ದು, ಕೆಲವು ಭಾಗಗಳಲ್ಲಿ ಸಾಧಾರಣ ಮಳೆಯೂ ಆಗಲಿದೆ. ಉಳಿದ ಪ್ರದೇಶಗಳಲ್ಲಿ ಸಾಮಾನ್ಯ ತಾಪಮಾನ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಇನ್ನು, ಬೆಂಗಳೂರು ನಗರ ಹಾಗೂ ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ನಗರ ಮತ್ತು ಗ್ರಾಮಾಂತರ ಪ್ರದೇಶಗಳಲ್ಲಿ ಮುಸ್ಸಂಜೆ ಅಥವಾ ರಾತ್ರಿ ವೇಳೆ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಹವಾಮಾನದಲ್ಲಿ ಏಕಾಏಕಿ ಬದಲಾವಣೆ ಆಗುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಮತ್ತು ರೈತರು ಹವಾಮಾನ ಇಲಾಖೆಯ ಸೂಚನೆಗಳನ್ನು ಪಾಲಿಸುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ.
ಇದನ್ನೂ ಓದಿ : ತುಮಕೂರಲ್ಲಿ ಯುವಕನ ಮೇಲೆ ಮಾರಕಾಸ್ತ್ರಗಳಿಂದ ಭೀಕರ ದಾಳಿ!



















