ಬೆಂಗಳೂರು: ರಾಜ್ಯದಲ್ಲಿ ಸೆಪ್ಟೆಂಬರ್ ತಿಂಗಳಲ್ಲಿ ವ್ಯಾಪಕ ಮಳೆಯಾಗಲಿದೆ ಎಂದು ಈಗಾಗಲೇ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಮಧ್ಯೆ ಮುಂದಿನ 48 ಗಂಟೆಗಳಲ್ಲಿ ರಾಜ್ಯದ ಮಲೆನಾಡು ಹಾಗೂ ಕರಾವಳಿ ಬಾಗದಲ್ಲಿ ಹೆಚ್ಚಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಭಾರೀ ಗಾಳಿ ಸಹಿತ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮಲೆನಾಡು ಹಾಗೂ ಕರಾವಳಿ ಜಿಲ್ಲೆಯಲ್ಲಿ ಹೆಚ್ಚಾಗಿ ಕಂಡು ಬರಲಿದೆ. ಅಲ್ಲದೇ, ಇನ್ನೂ ಹಲವು ಜಿಲ್ಲೆಗಳಲ್ಲಿ ಭಾರೀ ಗಾಳಿಯೊಂದಿಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದೆ. ಅಲ್ಲದೇ, ಗಾಳಿಯು ಗಂಟೆಗೆ 40ರಿಂದ 50 ಕಿಲೋ ಮೀಟರ್ ಬೀಸಲಿದೆ. ಅಲ್ಲದೇ, ಮಲೆನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ದಕ್ಷಿಣ ಒಳನಾಡಿನ ಚಾಮರಾಜನಗರ ವ್ಯಾಪ್ತಿಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಗಾಳಿಯು ಪ್ರತಿ ಗಂಟೆಗೆ 30 ರಿಂದ 40 ಕಿಲೋ ಮೀಟರ್ ವೇಗದಲ್ಲಿ ಬೀಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಆದರೆ, ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಕೊಪ್ಪಳ, ಕಲಬುರಗಿ, ವಿಜಯಪುರ, ಬಾಗಲಕೋಟೆ, ಬೀದರ್, ರಾಯಚೂರು ಭಾಗದಲ್ಲಿ ಸಾಧಾರಣ ಮಳೆ ಆಗಬಹುದು. ಬೆಂಗಳೂರು ಸೇರಿದಂತೆ ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಮೈಸೂರು, ತುಮಕೂರು, ಚಿತ್ರದುರ್ಗ, ಬಳ್ಳಾರಿ, ವಿಜಯಪುರ ಕಡೆಗಳಲ್ಲಿ ಚದುರಿದಂತೆ ಮಳೆಯಾಗಬಹುದು. ವಾತಾವರಣ ತೇವದಿಂದ ಕೂಡಿರಲಿದ್ದು, ಚಳಿ ಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ವ್ಯಾಪ್ತಿಯಲ್ಲಿ ಮುಂದಿನ ಎರಡು ದಿನ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.