ಮಡಿಕೇರಿ : ಜೀವನದಿ ಕಾವೇರಿಯ ಪವಿತ್ರ ತೀರ್ಥೋದ್ಭವಕ್ಕೆ ಕ್ಷಣಗಣನೆ ಆರಂಭವಾಗಿದೆ. ಕಾವೇರಿ ಉಗಮಸ್ಥಾನ ತಲಕಾವೇರಿಯಲ್ಲಿ ಶುಕ್ರವಾರ (ಅ.17) ಮಧ್ಯಾಹ್ನ 1:44ಕ್ಕೆ ಸಲ್ಲುವ ಮಕರ ಲಗ್ನದಲ್ಲಿ ಕಾವೇರಿಯು ಬ್ರಹ್ಮ ಕುಂಡಿಕೆಯಿಂದ ತೀರ್ಥರೂಪಿಣಿಯಾಗಿ ಭಕ್ತರಿಗೆ ದರ್ಶನ ನೀಡಲಿದ್ದಾಳೆ. ಸಹಸ್ರಾರು ಭಕ್ತರು ತೀರ್ಥಸ್ವರೂಪಿಣಿ ಕಾವೇರಿ ಮಾತೆಯನ್ನು ಕಣ್ತುಂಬಿಕೊಳ್ಳಲು ಕಾತರರಾಗಿದ್ದಾರೆ.
ಒಂದು ತಿಂಗಳ ಕಾಲ ನಡೆಯುವ ಕಾವೇರಿ ತುಲಾ ಸಂಕ್ರಮಣ ಜಾತ್ರಗೆ ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದ್ದು, ವರ್ಷಕ್ಕೊಮ್ಮೆ ಘಟಿಸುವ ಈ ವಿಸ್ಮಯವನ್ನು ಕಣ್ತುಂಬಿಕೊಳ್ಳಲು ದೇಶದ ಹಲವು ಭಾಗಗಳಿಂದ ಸಹಸ್ರಾರು ಸಂಖ್ಯೆಯ ಭಕ್ತರು ಆಗಮಿಸುತ್ತಿದ್ದಾರೆ. ಕೊಡಗಿನ ಜನರ ಕುಲದೇವತೆ ಕರ್ನಾಟಕದ ಜೀವನದಿ ಕಾವೇರಿಯ ತೀರ್ಥೋದ್ಭವಕ್ಕೆ ಜಿಲ್ಲಾಡಳಿತ ಕೂಡ ಈಗಾಗಲೇ ಎಲ್ಲಾ ತಯಾರಿ ಮಾಡಿಕೊಂಡಿದೆ.
ಶ್ರೀ ಭಗಂಡೇಶ್ವರ ಮತ್ತು ತಲಕಾವೇರಿ ದೇವಾಲಯಗಳಿಗೆ ವಿದ್ಯುತ್ ದೀಪಾಲಂಕಾರ, ಸುತ್ತಲೂ ಬ್ಯಾರಿಕೇಡ್ ಅಳವಡಿಕೆ, ವೇದಿಕೆ ನಿರ್ಮಾಣ, ಮಳೆಯಿಂದ ರಕ್ಷಣೆಗಾಗಿ ಮೆಟಲ್ ಶೀಟ್, ಪೆಂಡಾಲ್‌ಗಳು, ಹೂವಿನ ಅಲಂಕಾರ ಮತ್ತಿತರ ಕೆಲಸ ಕಾರ್ಯಕ್ಕೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ತೀರ್ಥೋದ್ಭವದ ವೀಕ್ಷಣೆಯ ವೇಳೆ ನೂಕು ನುಗ್ಗಲು ಉಂಟಾಗದಂತೆ ಎಲ್‌ಇಡಿ ಪರದೆಗಳು, ಫೋಟೋಗ್ರಫಿ ಮತ್ತು ಭಕ್ತಾದಿಗಳ ಭದ್ರತೆಯ ದೃಷ್ಟಿಯಿಂದ ಅವಶ್ಯವಿರುವ ಕಡೆಗಳಲ್ಲಿ ಸಿ.ಸಿ. ಕ್ಯಾಮೆರಾಗಳ ಅಳವಡಿಕೆಗೆ ಕ್ರಮ ಕೈಗೊಳ್ಳಲಾಗಿದೆ.
ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು, ಸಾರಿಗೆ ಮತ್ತು ಮುಜರಾಯಿ ಸಚಿವರಾದ ರಾಮಲಿಂಗಾ ರೆಡ್ಡಿ, ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ಶಾಸಕರಾದ ಎ.ಎಸ್.ಪೊನ್ನಣ್ಣ, ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ರಾಜ್ಯಸಭಾ ಸದಸ್ಯರಾದ ಅಜಯ್ ಮಾಕನ್, ಶಾಸಕರಾದ ಡಾ.ಮಂತರ್ ಗೌಡ, ವಿಧಾನ ಪರಿಷತ್ ಸದಸ್ಯರಾದ ಎಂ.ಪಿ.ಸುಜಾ ಕುಶಾಲಪ್ಪ ಅನೇಕರು ನಾಳೆ ಕಾವೇರಿ ಮಾತೆಯನ್ನು ಕಣ್ತುಂಬಿಕೊಳ್ಳಲಿದ್ದಾರೆ.