ಬಳ್ಳಾರಿ : ಬಳ್ಳಾರಿಯ ಅಶೋಕ್ ನಗರ ಕ್ಯಾಂಪ್ ಸಮೀಪ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಎತ್ತಿನ ಗಾಡಿಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಎರಡು ಎತ್ತುಗಳು ಸ್ಥಳದಲ್ಲೇ ಸಾವನ್ನಪ್ಪಿವೆ. ಅಪಘಾತದಲ್ಲಿ ಎತ್ತಿನ ಗಾಡಿ ಚಲಾಯಿಸುತ್ತಿದ್ದ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಎತ್ತಿನ ಗಾಡಿಯ ಮೂಲಕ ಮರಳು ಸಾಗಣೆ ಮಾಡಲಾಗುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ. ವೇಗವಾಗಿ ಬಂದ ಕಾರು ಎತ್ತಿನ ಗಾಡಿಗೆ ಡಿಕ್ಕಿ ಹೊಡೆದ ಪರಿಣಾಮ ಗಾಡಿ ಸಂಪೂರ್ಣ ಜಖಂಗೊಂಡಿದ್ದು, ಎರಡು ಎತ್ತುಗಳು ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿವೆ.
ಗಾಯಗೊಂಡ ವ್ಯಕ್ತಿಯನ್ನು ಸ್ಥಳೀಯರು ತಕ್ಷಣ ಆಸ್ಪತ್ರೆಗೆ ಸಾಗಿಸಿದ್ದು, ಚಿಕಿತ್ಸೆ ಮುಂದುವರಿದಿದೆ. ಘಟನೆ ಸಂಬಂಧ ಮೋಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಪ್ರಾಥಮಿಕ ಮಾಹಿತಿ ಪ್ರಕಾರ ಎತ್ತಿನ ಬಂಡಿ ರಾಂಗ್ ರೂಟ್‌ನಲ್ಲಿ ಸಂಚರಿಸಿದ್ದೇ ಅಪಘಾತಕ್ಕೆ ಕಾರಣ ಎನ್ನಲಾಗುತ್ತಿದೆ. ಪ್ರಕರಣ ಸಂಬಂಧ ಪೊಲೀಸರು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.
ಇದನ್ನೂ ಓದಿ : ಚಿಕ್ಕಮಗಳೂರಲ್ಲಿ ಜಿಂಕೆ ಬೇಟೆಯಾಡಿದ ಮೂವರ ಬಂಧನ!



















