ಹೈದರಾಬಾದ್: ಬೈಕ್ ಮತ್ತು ಬಸ್ಸಿನ ನಡುವೆ ನಡೆದ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಬಸ್‌ನಲ್ಲಿದ್ದ 20ಕ್ಕೂ ಹೆಚ್ಚು ಪ್ರಯಾಣಿಕರು ಮೃತಪಟ್ಟಿರುವ ದುರ್ಘಟಣೆ ಹೈದರಾಬಾದ್‌ನ ಕರ್ನೂಲ್‌ನಲ್ಲಿ ನಡೆದಿದೆ.
ಬೈಕ್‌ನಲ್ಲಿದ್ದ ವ್ಯಕ್ತಿಯನ್ನು ಶಿವಶಂಕರ್ ಎಂದು ಗುರುತಿಸಲಾಗಿದೆ. ಬೈಕ್ ಬಸ್ಸಿಗೆ ಡಿಕ್ಕಿ ಹೊಡೆದಿದೆಯೇ ಅಥವಾ ಬಸ್ಸಿಗೆ ಬೈಕ್‌ಗೆ ಡಿಕ್ಕಿ ಹೊಡೆದಿದೆಯೇ ಎನ್ನುವುದು ಇನ್ನೂ ಸ್ಪಷ್ಟವಾಗಿಲ್ಲ. ಇದು ತನಿಖೆಯಿಂದ ದೃಢಪಡಬೇಕಿದೆ ಎಂದು ಕರ್ನೂಲ್ ಜಿಲ್ಲಾಧಿಕಾರಿ ಸಿರಿ ತಿಳಿಸಿದ್ದಾರೆ.
ಕೆಲವರು ವೇಗವಾಗಿ ಬಂದ ಬೈಕ್ ಸವಾರ ಬಸ್ಸಿನ ಹಿಂಬದಿಗೆ ಗುದ್ದಿದ್ದರಿಂದ ಈ ದುರಂತ ಸಂಭವಿಸಿದೆ ಎಂದು ಹೇಳಿದರೆ ಕೆಲವರು ಬಸ್ಸು ಮತ್ತು ಬೈಕ್ ಮುಖಾಮುಖಿ ಡಿಕ್ಕಿ ಹೊಡೆದಿದೆ ಎನ್ನುತ್ತಿದ್ದಾರೆ. ಒಂದು ವೇಳೆ ಮುಖಾಮುಖಿ ಡಿಕ್ಕಿ ಹೊಡೆದಿದ್ದರೆ ಚಾಲಕ ಬಸ್ಸನ್ನು ನಿಲ್ಲಿಸಿದ್ದರೆ ಈ ದುರಂತ ಸಂಭವಿಸುತ್ತಿರಲಿಲ್ಲ.
ಗುದ್ದಿದ ರಭಸಕ್ಕೆ ಬಸ್ಸಿನ ಕೆಳಭಾಗಕ್ಕೆ ಬೈಕ್ ನುಗ್ಗಿದೆ. ಕೆಳಭಾಗದಲ್ಲಿ ಸಿಲುಕಿಕೊಂಡಿದ್ದ ಬೈಕನ್ನು ಬಸ್ಸು 300 ಮೀ. ದೂರದವರೆಗೆ ಎಳೆದುಕೊಂಡು ಹೋಗಿದೆ. ಈ ವೇಳೆ ಬೈಕಿನಲ್ಲಿದ್ದ ಪೆಟ್ರೋಲ್ ಕೆಳಕ್ಕೆ ಚೆಲ್ಲಿದೆ. ರಸ್ತೆಯಲ್ಲಿ ಬೈಕನ್ನು ಎಳೆದುಕೊಂಡು ಹೋಗಿದ್ದರಿಂದ ಘರ್ಷಣೆಯಿಂದಾಗಿ ಕಿಡಿ ಹೊತ್ತಿದೆ. ಬೆಂಕಿಯ ಕಿಡಿ ಡೀಸೆಲ್ ಟ್ಯಾಂಕ್ ಮೇಲೆ ಕಿಡಿ ಚಿಮ್ಮಿದ ಕೂಡಲೇ ಬೆಂಕಿ ಹೊತ್ತಿಕೊಂಡು ಹೊತ್ತಿ ಉರಿದಿದೆ.
ಬೆಂಗಳೂರು ಮತ್ತು ಹೈದರಾಬಾದ್ ಮಧ್ಯೆ 575 ಕಿ.ಮೀ ಅಂತರವಿರುವುದರಿಂದ ಇಬ್ಬರು ಚಾಲಕರು ಬಸ್ಸಿನಲ್ಲಿದ್ದರು. ಸಾಧಾರಣವಾಗಿ ದೀರ್ಘ ಪ್ರಯಾಣಕ್ಕೆ ಇಬ್ಬರು ಚಾಲಕರನ್ನು ನಿಯೋಜಿಸಲಾಗುತ್ತದೆ. ದುರಂತ ನಡೆದ ಬಳಿಕ ಬಸ್ಸು ಚಾಲನೆ ಮಾಡುತ್ತಿದ್ದ ಚಾಲಕ ಪರಾರಿಯಾಗಿದ್ದರೆ ಮತ್ತೊಬ್ಬ ಚಾಲಕನನ್ನು ವಶಕ್ಕೆ ಪಡೆದ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.
ಘಟನಾ ಸ್ಥಳಕ್ಕೆ ವಿಧಿವಿಜ್ಞಾನ ಪ್ರಯೋಗಾಲಯ (ಎಫ್‌ಎಸ್‌ಎಲ್) ತಂಡವು ಆಗಮಿಸಿ ತನಿಖೆ ನಡೆಸುತ್ತಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ವಿಕ್ರಾಂತ್ ತಿಳಿಸಿದ್ದಾರೆ.
ಆಂಧ್ರದ ಕರ್ನೂಲ್ ಬಳಿಯ ಚಿನ್ನಟೇಕೂರು ಈ ದುರಂತ ಸಂಭವಿಸಿ 20 ಮಂದಿ ಮೃತಪಟ್ಟಿದ್ದಾರೆ. ಸ್ಲೀಪರ್ ಕೋಚ್ ಬಸ್ಸು ಆಗಿದ್ದ ಕಾರಣ ಪ್ರಯಾಣಿಕರು ನಿದ್ದೆ ಮಾಡುತ್ತಿದ್ದರು. ಸಾಧಾರಣವಾಗಿ ವೋಲ್ವೋ ಬಸ್ಸಿನಲ್ಲಿ ಕಿಟಕಿಯ ಗಾಜುಗಳು ಸಂಪೂರ್ಣವಾಗಿ ಲಾಕ್ ಆಗಿರುತ್ತದೆ. ಹೀಗಿದ್ದರೂ ಬೆಂಕಿ ಕಾಣಿಸಿದ ಕೂಡಲೇ ಕೆಲ ಪ್ರಯಾಣಿಕರು ಗಾಜನ್ನು ಒಡೆದು ಕೆಳಗೆ ಹಾರಿ ಜೀವ ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ತಿಳಿದು ಬಂದಿದೆ.



















