ದಾವಣಗೆರೆ : ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರನೊಬ್ಬ ಲಾರಿ ಚಕ್ರಕ್ಕೆ ಸಿಲುಕಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಗರದ ಬಂಬೂಬಜಾರ್ ರಸ್ತೆಯಲ್ಲಿ ಸಂಭವಿಸಿದೆ. ಮೃತರನ್ನು ದಾವಣಗೆರೆ ನಗರದ ಸರಸ್ವತಿ ನಗರ ನಿವಾಸಿ ಮಂಜುನಾಥ ಕಡಕೋಳ್ (55) ಎಂದು ಗುರುತಿಸಲಾಗಿದೆ.
ಮಂಜುನಾಥ ಕಡಕೋಳ್ ಅವರು ದಾವಣಗೆರೆ ಎಪಿಎಂಸಿಯಲ್ಲಿ ಹಮಾಲಿಯಾಗಿ ಕೆಲಸ ಮಾಡುತ್ತಿದ್ದರು. ಸಿಮೆಂಟ್ ತುಂಬಿದ್ದ ಟ್ರಾಕ್ಟರ್ ಪಕ್ಕದಲ್ಲಿ ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ, ಇದ್ದಕ್ಕಿದ್ದಂತೆ ಬಂದ ಲಾರಿ ಮಂಜುನಾಥ ಕಡಕೋಳ್ ಬೈಕ್‌ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಅವರು ಲಾರಿ ಚಕ್ರದಡಿ ಸಿಲುಕಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಪಘಾತದ ಭೀಕರ ದೃಶ್ಯ ಪಕ್ಕದ ಅಂಗಡಿಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ದಾವಣಗೆರೆ ನಗರದ ಆರ್‌ಎಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ : ರೈಲ್ವೆ ಹಳಿಯಲ್ಲಿ ದೇಹ ಎರಡು ಭಾಗ : 28 ವರ್ಷದ ಯುವಕನ ಅನುಮಾನಾಸ್ಪದ ಸಾವು!



















