ಹಾಸನ : ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಬೆಳಗುಲಿ ಗ್ರಾಮದ ಬಳಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಪರಿಚಿತ ವಾಹನ ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಈ ಅವಘಡ ಸಂಭವಿಸಿದ್ದು, ಮೃತರು ಅರಸೀಕೆರೆ ತಾಲೂಕಿನ ಗಂಡಸಿ ಹೋಬಳಿಯ ಕಾಳೇನಹಳ್ಳಿ ಗ್ರಾಮದ ನಿವಾಸಿಗಳಾಗಿದ್ದಾರೆ.
ಮೃತರನ್ನು ಪ್ರದೀಪ್ (22) ಹಾಗೂ ಅರುಣ್ (21) ಎಂದು ಗುರುತಿಸಲಾಗಿದೆ. ಇಬ್ಬರೂ ಶುಂಠಿ ಕೆಲಸದ ನಿಮಿತ್ತ ಹೊರಗಡೆ ಹೋಗಿದ್ದು, ಕೆಲಸ ಮುಗಿಸಿ ವಾಪಸ್ ತಮ್ಮ ಊರಿಗೆ ಮರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ.
ಬೆಳಗುಲಿ ಗ್ರಾಮದ ಸಮೀಪ ಬೈಕ್‌ನಲ್ಲಿ ಸಾಗುತ್ತಿದ್ದ ವೇಳೆ ಅಪರಿಚಿತ ವಾಹನ ವೇಗವಾಗಿ ಬಂದು ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಡಿಕ್ಕಿಯ ರಭಸಕ್ಕೆ ಬೈಕ್ ಸಂಪೂರ್ಣ ಜಖಂಗೊಂಡಿದ್ದು, ಪ್ರದೀಪ್ ಹಾಗೂ ಅರುಣ್ ಇಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಈ ಸಂಬಂಧ ನುಗ್ಗೇಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಡಿಕ್ಕಿ ಹೊಡೆದು ಪರಾರಿಯಾದ ಅಪರಿಚಿತ ವಾಹನದ ಪತ್ತೆಗೆ ಪೊಲೀಸರು ಮುಂದಾಗಿದ್ದಾರೆ.
ಇದನ್ನೂ ಓದಿ : ಮಂಡ್ಯದಲ್ಲಿ ಅರಣ್ಯ ಇಲಾಖೆ ಬೋನಿಗೆ ಬಿದ್ದ ಭಾರೀ ಗಾತ್ರದ ಚಿರತೆ!



















