ಉಡುಪಿ : ಜಿಲ್ಲೆಯ ತೆಕ್ಕಟ್ಟೆ ಸರ್ಕಲ್ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಮಂಗಳವಾರ ರಾತ್ರಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಪಿಕಪ್ ಮತ್ತು ಬೈಕ್ ನಡುವೆ ನಡೆದ ಡಿಕ್ಕಿಯಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಯನ್ನು ಗಣೇಶ್ ಎಂದು ಗುರುತಿಸಲಾಗಿದ್ದು, ಅವರು ಮಣೂರು ಜಟ್ಟಿಗೇಶ್ವರ ದೈವಸ್ಥಾನದ ಸಮೀಪದ ನಿವಾಸಿಯಾಗಿದ್ದಾರೆ. ಪಿಕಪ್ ಹಾಗೂ ಬೈಕ್ ನಡುವೆ ಸಂಭವಿಸಿದ ತೀವ್ರ ಡಿಕ್ಕಿಯಿಂದ ಗಣೇಶ್ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
ಅಪಘಾತದ ಸಂಪೂರ್ಣ ದೃಶ್ಯ ಸಮೀಪದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಘಟನೆಯ ಭೀಕರತೆ ದೃಶ್ಯಗಳಲ್ಲಿ ಕಂಡುಬಂದಿದೆ. ಮಾಹಿತಿ ತಿಳಿದು ಸ್ಥಳಕ್ಕೆ ಧಾವಿಸಿದ ಪೊಲೀಸರು ಪರಿಶೀಲನೆ ನಡೆಸಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಈ ಸಂಬಂಧ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಪಘಾತಕ್ಕೆ ಕಾರಣಗಳ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಇದನ್ನೂ ಓದಿ : ಮರ ಕಡಿಯುವ ವಿಚಾರಕ್ಕೆ ಸಂಬಂಧಿಕರ ಮಧ್ಯೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ!


















