ಬಾಗಲಕೋಟೆ: ಬಿಜೆಪಿಯಲ್ಲಿ ಪ್ರಾಮಾಣಿಕರಿಗೆ ಸಿಎಂ ಸ್ಥಾನ ಕೊಡಲು ನಿರ್ಧರಿಸಿದರೆ, ನಾನೇ ಮುಂಚೂಣಿಯಲ್ಲಿರುತ್ತೇನೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.
ಜಿಲ್ಲೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನಗೂ ಸಿಎಂ ಆಗುವ ಅರ್ಹತೆ ಇದೆ. ಒಂದು ವೇಳೆ ಸಿಎಂ ಆಗದಿದ್ದರೂ ನಾನು ತಲೆ ಕೆಡಿಸಿಕೊಳ್ಳಲ್ಲ. ನಾನು ಪಕ್ಷದ ಶಿಸ್ತಿನ ಸಿಪಾಯಿ. ಎಲ್ಲದಕ್ಕಿಂತಲೂ ಹೆಚ್ಚಾಗಿ ಪ್ರಾಮಾಣಿಕ. ಇಷ್ಟೆಲ್ಲ ಗುಣಗಳಿದ್ದರೂ ನಾನ್ಯಾಕೆ ರಾಜ್ಯದ ಸಿಎಂ ಆಗಬಾರದು, ನನ್ನಲ್ಲೇನು ಕೊರತೆ ಇದೆ ಎಂದು ಪ್ರಶ್ನಿಸಿದ್ದಾರೆ.
ಹೈಕಮಾಂಡ್ ಭೇಟಿ ಮಾಡಿದ್ದ ಸಂದರ್ಭದಲ್ಲಿ ನಾನು ಎಲ್ಲ ವಿಷಯಗಳ ಕುರಿತು ಚರ್ಚಿಸಿದ್ದೇನೆ. ನಾನು ಪಕ್ಷದಲ್ಲಿನ ನನ್ನ ವಿರೋಧಿಗಳ ಬಗ್ಗೆ ಮಾತನಾಡುವುದಿಲ್ಲ ಎಂದಿದ್ದಾರೆ.