ನವದೆಹಲಿ: ಡಿಸಿಎಂ ಡಿ.ಕೆ ಶಿವಕುಮಾರ್ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ನೋಟಿಸ್ ಜಾರಿ ಮಾಡಿದೆ.
ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basangouda Patil Yatnal) ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಪ್ರತಿವಾದಿಗಳಿಗೆ ನೋಟಿಸ್ ನೀಡಿದೆ. ಡಿಸಿಎಂ ಡಿ.ಕೆ ಶಿವಕುಮಾರ್, ರಾಜ್ಯ ಸರ್ಕಾರ ಹಾಗೂ ಲೋಕಾಯುಕ್ತಕ್ಕೆ ನೋಟಿಸ್ ನೀಡಿ ಸುಪ್ರೀಂಕೋರ್ಟ್ (Supreme Court) ನಾಲ್ಕು ವಾರಗಳ ಕಾಲ ವಿಚಾರಣೆ ಮುಂದೂಡಿದೆ.
ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಕೆ ಶಿವಕುಮಾರ್ ವಿರುದ್ಧದ ಸಿಬಿಐ ಪ್ರಕರಣ ಹಿಂಪಡೆದ ಸರ್ಕಾರದ ನಿರ್ಧಾರ ಪ್ರಶ್ನಿಸಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಆದರೆ, ಹೈಕೋರ್ಟ್ ಈ ಅರ್ಜಿಯನ್ನು ಆ. 29ರಂದು ತಿರಸ್ಕರಿಸಿತ್ತು.
ಅಲ್ಲದೇ, ರಾಜ್ಯ ಸರ್ಕಾರ ಹಾಗೂ ಸಿಬಿಐ ನಡುವಿನ ಪ್ರಕರಣವನ್ನು ಸುಪ್ರೀಂಕೋರ್ಟ್ ತೀರ್ಮಾನಿಸಲಿ ಎಂದು ಅಭಿಪ್ರಾಯಪಟ್ಟಿತ್ತು. ಸುಪ್ರೀಂ ಕೋರ್ಟ್ ವಿಚಾರಣೆ ನಡೆಸಿದರೆ ಸೂಕ್ತ ಎಂದು ಹೈಕೋರ್ಟ್ ಪೀಠ ಹೇಳಿತ್ತು. ಹೀಗಾಗಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಸುಪ್ರೀಂಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು.
ಅರ್ಜಿ ಸಲ್ಲಿಕೆಯಾದ ಹಿನ್ನೆಲೆಯಲ್ಲಿ ಸುಪ್ರೀಂಕೋರ್ಟ್ ಇಂದು ಅರ್ಜಿ ವಿಚಾರಣೆ ನಡೆಸಿತು. ಪ್ರಕರಣಕ್ಕೆ ಪ್ರತಿವಾದ ಮಂಡಿಸುವಂತೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್, ಕರ್ನಾಟಕ ಸರ್ಕಾರ ಮತ್ತು ಲೋಕಾಯುಕ್ತಕ್ಕೆ ನೋಟಿಸ್ ಜಾರಿ ಮಾಡಿ, ನಾಲ್ಕು ವಾರಗಳ ಕಾಲ ವಿಚಾರಣೆ ಮುಂದೂಡಿಕೆ ಮಾಡಿದೆ.