ಬೆಂಗಳೂರು : ಅಕ್ರಮವಾಗಿ ಬೆಟ್ಟಿಂಗ್ ಕಂಪನಿ ನಡೆಸುತ್ತಿದ್ದ ಆರೋಪಕ್ಕೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಬಂಧನಕ್ಕೀಡಾಗಿರುವ ಕಾಂಗ್ರೆಸ್ ಶಾಸಕ ಕೆಸಿ ವೀರೇಂದ್ರ ಪಪ್ಪಿಗೆ ನ್ಯಾಯಾಲಯ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಆದೇಶ ಹೊರಡಿಸಿದೆ.
ಇ.ಡಿ ಕಸ್ಟಡಿ ಅವಧಿ ಮುಕ್ತಾಯಗೊಂಡ ಹಿನ್ನೆಲೆಯಲ್ಲಿ ಪಪ್ಪಿ ಅವರನ್ನು ಇಂದು(ಸೋಮವಾರ) ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ಈ ಸಂದರ್ಭದಲ್ಲಿ ವಿಚಾರಣೆ ನಡೆಸಿದ ನ್ಯಾಯಾಲಯ ವಿರೇಂದ್ರ ಪಪ್ಪಿ ಅವರನ್ನು ಸೆ. 22ರವರೆಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶಿಸಿದೆ.
ಅಕ್ರಮ ಬೆಟ್ಟಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವು ರಾಜ್ಯಗಳಲ್ಲಿ ಇ.ಡಿ ದಾಳಿ ನಡೆಸಿತ್ತು. ಇ.ಡಿ ನಡೆಸಿದ ದಾಳಿಯ ಸಂದರ್ಭದಲ್ಲಿ ಶಾಸಕ ವೀರೇಂದ್ರ ಪಪ್ಪಿ ಮನೆಯಲ್ಲಿ 12 ಕೋಟಿ ರೂ. ನಗದು (ಒಂದು ಕೋಟಿ ರೂ. ವಿದೇಶಿ ಕರೆನ್ಸಿ ಸೇರಿದಂತೆ), 6 ಕೋಟಿ ರೂ. ಮೌಲ್ಯದ ಚಿನ್ನಾಭರಣ, ಸುಮಾರು 10 ಕೆಜಿ ಬೆಳ್ಳಿ ಮತ್ತು ನಾಲ್ಕು ವಾಹನಗಳನ್ನು ವಶಪಡಿಸಿಕೊಂಡಿತ್ತು.