ಕುವೈತ್ ಕಾರ್ಮಿಕರ ಶಿಬಿರದಲ್ಲಿ (Labour Camp) ಭೀಕರ ಅಗ್ನಿ ಅವಘಡ(Fire Accident) ಸಂಭವಿಸಿದ ಪರಿಣಾಮ 40 ಜನ ಭಾರತೀಯರು ಸಾವನ್ನಪ್ಪಿದ್ದು, ಪ್ರಧಾನಿ ನರೇಂದ್ರ ಮೋದಿ (Narendra Modi) ಸಂತಾಪ ಸೂಚಿಸಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ಸಂತಾಪ ಸೂಚಿಸಿರುವ ಅವರು, ಕುವೈತ್ ನ ಅಗ್ನಿ ಅವಘಡ ಅತ್ಯಂತ ದುಃಖಕರವಾಗಿದೆ. ದುರಂತದಲ್ಲಿ ತಮ್ಮವರನ್ನು ಕಳೆದುಕೊಂಡ ಕುಟುಂಬದವರೊಂದಿಗೆ ನಾವಿದ್ದೇವೆ. ಗಾಯಾಳುಗಳು ಆದಷ್ಟು ಬೇಗ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ. ಕುವೈತ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಯು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ ಮತ್ತು ಸಂತ್ರಸ್ತರಿಗೆ ಸಹಾಯ ಮಾಡಲು ಅಲ್ಲಿನ ಅಧಿಕಾರಿಗಳೊಂದಿಗೆ ಕೆಲಸ ಮಾಡುತ್ತಿದೆ ಎಂದು ಹೇಳಿದ್ದಾರೆ.
ಕುವೈತ್ ನ ಮಂಗಾಫ್ ನಗರದಲ್ಲಿ ಕಾರ್ಮಿಕರ ಶಿಬಿರದಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ 40 ಜನ ಭಾರತೀಯರು ಸಾವನ್ನಪ್ಪಿದ್ದಾರೆ. ಅಲ್ಲದೇ, ಸುಮಾರು 40ಕ್ಕೂ ಅಧಿಕ ಜನರು ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸ ಪಡೆಯುತ್ತಿದ್ದಾರೆ.
ವಿದೇಶಾಂಗ ಸಚಿವ ಎಸ್ ಜೈಶಂಕರ್ ಕೂಡ ಟ್ವೀಟ್ ಮೂಲಕ ಸಂತಾಪ ಸೂಚಿಸಿದ್ದಾರೆ. ಅಗ್ನಿ ದುರಂತದ ಸುದ್ದಿ ಕೇಳಿ ತೀವ್ರ ಆಘಾತವಾಗಿದೆ. 40ಕ್ಕೂ ಹೆಚ್ಚು ಸಾವುಗಳು ಸಂಭವಿಸಿದ್ದು, 50ಕ್ಕೂ ಹೆಚ್ಚು ಜನರು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ವರದಿಯಾಗಿದೆ. ನಮ್ಮ ರಾಯಭಾರಿ ಶಿಬಿರಕ್ಕೆ ಹೋಗಿದ್ದಾರೆ. ನಾವು ಹೆಚ್ಚಿನ ಮಾಹಿತಿಗಾಗಿ ಕಾಯುತ್ತಿದ್ದೇವೆ ಎಂದು ಹೇಳಿದ್ದಾರೆ.
