ಮುಂಬೈ: ಭಾರತ ತಂಡದ ಯುವ ಆರಂಭಿಕ ಬ್ಯಾಟ್ಸ್‌ಮನ್ ಅಭಿಷೇಕ್ ಶರ್ಮಾ (Abhishek Sharma) ಅಂತಾರಾಷ್ಟೀಯ ಟಿ20 ಕ್ರಿಕೆಟ್‌ನಲ್ಲಿ ವಿನೂತನ ಇತಿಹಾಸ ಸೃಷ್ಟಿಸಿದ್ದಾರೆ. ಇಂಗ್ಲೆಂಡ್ ವಿರುದ್ದದ ಐದನೇ ಟಿ20ಐ ಪಂದ್ಯದಲ್ಲಿ ವೇಗದ ಶತಕ ಸಿಡಿಸುವ ಮೂಲಕ ಅಭಿಷೇಕ್ ಶರ್ಮಾ ವಿಶೇಷ ದಾಖಲೆಯನ್ನು ಸೃಷ್ಟಿಸಿದ್ದಾರೆ.
ಅಭಿಷೇಕ್ ಶರ್ಮಾ ದಾಖಲೆ
ಎಡಗೈ ಬ್ಯಾಟರ್ ಅಭಿಷೇಕ್ ಶರ್ಮಾ ಟಿ20ಐ ಕ್ರಿಕೆಟ್‌ನಲ್ಲಿ ಅತ್ಯಂತ ವೇಗದ ಶತಕ ಬಾರಿಸಿದ ಭಾರತದ ಎರಡನೇ ಬ್ಯಾಟ್ಸ್‌ಮನ್ ಎನಿಸಿಕೊಂಡಿದ್ದಾರೆ. ಭಾನುವಾರ ಇಲ್ಲಿನ ವಾಂಖೆಡೆ ಕ್ರೀಡಾಂಗಣದಲ್ಲಿ ಇಂಗ್ಲೆಂಡ್ ವಿರುದ್ಧ ನಡೆದಿದ್ದ ಐದನೇ ಟಿ20ಐ ಪಂದ್ಯದಲ್ಲಿ ಭಾರತ ತಂಡದ ಪರ ಇನಿಂಗ್ಸ್ ಆರಂಭಿಸಿದ ಅಭಿಷೇಕ್ ಶರ್ಮಾ, ತಾನು ಎದುರಿಸಿದ ಮೊದಲನೇ ಎಸೆತದಿಂದಲೂ ಸ್ಪೋಟಕ ಬ್ಯಾಟಿಂಗ್‌ಗೆ ಕೈ ಹಾಕಿದರು. ಕೇವಲ 17 ಎಸೆತಗಳಲ್ಲಿ ಅರ್ಧಶತಕ ಸಿಡಿಸಿದರು. ಆ ಮೂಲಕ ಯುವರಾಜ್ ಸಿಂಗ್ ಬಳಿಕ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ ವೇಗದ ಅರ್ಧಶತಕ ಸಿಡಿಸಿದ ಭಾರತದ ಎರಡನೇ ಬ್ಯಾಟ್ಸ್‌ಮನ್ ಎಂಬ ಖ್ಯಾತಿ ಪಡೆದರು.
ಎರಡನೇ ವೇಗದ ಶತಕ ಬಾರಿಸಿದ ಅಭಿಷೇಕ್ ಶರ್ಮಾ
ಅರ್ಧಶತಕ ಸಿಡಿಸಿದ ಬಳಿಕ ತಮ್ಮ ಬ್ಯಾಟಿಂಗ್ ವೇಗವನ್ನು ಹೆಚ್ಚಿಸಿಕೊಂಡ ಅಭಿಷೇಕ್ ಶರ್ಮಾ, ಆಂಗ್ಲರ ಬೌಲರ್‌ಗಳನ್ನು ಮನಬಂದಂತೆ ದಂಡಿಸಿದರು. ಕೇವಲ 37 ಎಸೆತಗಳಲ್ಲಿ ಅಭಿಷೇಕ್ ಶರ್ಮಾ ಶತಕವನ್ನು ಪೂರ್ಣಗೊಳಿಸಿದರು. ಆ ಮೂಲಕ ಟಿ20ಐ ಕ್ರಿಕೆಟ್‌ನಲ್ಲಿ ಅತ್ಯಂತ ವೇಗದ ಶತಕ ಸಿಡಿಸಿದ ಭಾರತದ ಎರಡನೇ ಬ್ಯಾಟ್ಸ್‌ಮನ್ ಎನಿಸಿಕೊಂಡಿದ್ದಾರೆ. ಒಟ್ಟಾರೆಯಾಗಿ ವೇಗವಾಗಿ ಟಿ20ಐ ಶತಕ ಸಿಡಿಸಿದ ವಿಶ್ವದ ಮೂರನೇ ಬ್ಯಾಟ್ಸ್‌ಮನ್ ಎಂಬ ದಾಖಲೆಯನ್ನು ಅಭಿಷೇಕ್ ಶರ್ಮಾ ಬರೆದಿದ್ದಾರೆ.
ಭಾರತದ ಪರ ಟಿ20ಐ ಕ್ರಿಕೆಟ್‌ನಲ್ಲಿ ಅತ್ಯಂತ ವೇಗದ ಶತಕ ಸಿಡಿಸಿದ ಬ್ಯಾಟ್ಸ್‌ಮನ್ ಎಂಬ ದಾಖಲೆ ರೋಹಿತ್ ಶರ್ಮಾ ಹೆಸರಿನಲ್ಲಿದೆ. ಅವರು 2017ರಲ್ಲಿ ಶ್ರೀಲಂಕಾ ವಿರುದ್ದ ಇಂದೋರ್‌ನಲ್ಲಿ ನಡೆದಿದ್ದ ಪಂದ್ಯದಲ್ಲಿ ಕೇವಲ 35 ಎಸೆತಗಳನ್ನು ಶತಕ ಸಿಡಿಸಿದ್ದರು. ಬಾಂಗ್ಲಾದೇಶ ವಿರುದ್ಧ 2017ರಲ್ಲಿ ದಕ್ಷಿಣ ಆಫ್ರಿಕಾ ತಂಡದ ಡೇವಿಡ್ ಮಿಲ್ಲರ್ ಕೂಡ ಕೇವಲ 35 ಎಸೆತಗಳಲ್ಲಿ ಶತಕವನ್ನು ಬಾರಿಸಿದ್ದರು. ಆ ಮೂಲಕ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ ವೇಗದ ಶತಕ ಸಿಡಿಸಿದ ವಿಶ್ವದ ಮೊದಲ ಬ್ಯಾಟ್ಸ್‌ಮನ್ ಎಂಬ ಜಂಟಿ ದಾಖಲೆ ರೋಹಿತ್ ಶರ್ಮಾ ಹಾಗೂ ಡೇವಿಡ್ ಮಿಲ್ಲರ್ ಹೊಂದಿದ್ದಾರೆ. ಎರಡನೇ ಸ್ಥಾನದಲ್ಲಿ ಅಭಿಷೇಕ್ ಶರ್ಮಾ ಇದ್ದಾರೆ.