ಕುಂದಾಪುರ:ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ಸೆ. 15 ರಂದು ನಡೆಯಲಿರುವ ಮಾನವ ಸರಪಳಿ ಕಾರ್ಯಕ್ರಮದ ಅಂಗವಾಗಿ ಪೂರ್ವಭಾವಿ ಸಭೆಯು ಬೈಂದೂರು ತಾಲೂಕು ಸೌಧದಲ್ಲಿ ನಡೆಯಿತು.
ಕಾರ್ಯಕ್ರಮವು ರಾಜ್ಯದಾದ್ಯಂತ ಬೆಳಿಗ್ಗೆ 9.30ರಿಂದ 10.30ರ ವರೆಗೆ ನಡೆಯಲಿದ್ದು, ಬೈಂದೂರು ತಾಲೂಕಿನ ಮಾನವ ಸರಪಳಿ ಶಿರೂರು ಗೇಟ್ ನಿಂದ ತ್ರಾಸಿ ತನಕ ನಡೆಯಲಿದೆ. ಸೆ.14 ರಿಂದ ಅಕ್ಟೋಬರ್ ತಿಂಗಳ ವರೆಗೆ ಸ್ವಚ್ಛತಾ ಆಂದೋಲನ ಜಾರಿಯಲ್ಲಿರುವುದರಿಂದ ಸ್ವಭಾವ ಸ್ವಚ್ಛತೆ ಹಾಗೂ ಸಂಸ್ಕಾರ ಸ್ವಚ್ಛತೆ ಎನ್ನುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಸೆ.15 ರಂದು ಸ್ವಚ್ಛತಾ ಕಾರ್ಯಕ್ರಮ ಹಾಗೂ ತಾಯಿಯ ಹೆಸರಿನಲ್ಲಿ ಗಿಡ ನೆಡುವ ಕಾರ್ಯಕ್ರಮ ಕೂಡ ಆಯೋಜಿಸಲಾಗಿದೆ ಎಂದು ಬೈಂದೂರು ತಾಲೂಕು ಆಡಳಿತ ಹೇಳಿದೆ.

ಈ ವೇಳೆ ಬೈಂದೂರು ಕ್ಷೇತ್ರದ ಶಾಸಕ ಗುರುರಾಜ್ ಗಂಟಿಹೊಳೆ ಮಾತನಾಡಿ, ಪ್ರಪಂಚದಲ್ಲಿ ಬೇರೆ ಬೇರೆ ರೀತಿಯ ಆಡಳಿತ ವ್ಯವಸ್ಥೆಯನ್ನು ನೋಡಬಹುದಾಗಿದೆ. ನಮ್ಮದು ವಿಶ್ವದ ಅತಿ ದೊಡ್ಡ ಪ್ರಜಾಪ್ರಭುತ್ವ ವ್ಯವಸ್ಥೆ. ಸೆ.15 ರಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ನಡೆಯಲ್ಲಿದ್ದು, ಈ ಕಾರ್ಯಕ್ರಮಕ್ಕೆ ಸಾರ್ವಜನಿಕರು ಸ್ವಯಂ ಪ್ರೇರಿತವಾಗಿ ಹೆಚ್ಚಿನ ಸಂಖ್ಯೆಯಲ್ಲಿ ಬಾಗವಹಿಸಿ ಕಾರ್ಯಕ್ರಮ ಯಶಸ್ಸಿಗೊಳಿಸಬೇಕು ಎಂದು ಮನವಿ ಮಾಡಿದರು.
ರಾಷ್ಟ್ರೀಯ ಹೆದ್ದಾರಿಯಲ್ಲಿ–66ರಲ್ಲಿ ಪ್ರತಿ 10.ಕೀ.ಮೀ.ಗಳಿಗೆ ಆಂಬುಲೆನ್ಸ್ ವ್ಯವಸ್ಥೆ ಮಾಡಲಾಗಿರುತ್ತದೆ. ಕಾರ್ಯಕ್ರಮದ ಮೇಲುಸ್ತುವಾರಿ ವಹಿಸಲು ಜಿಲ್ಲಾ ಮಟ್ಟದಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿಯ ಅಧ್ಯಕ್ಷತೆಯಲ್ಲಿ ಹಾಗೂ ತಾಲ್ಲೂಕು ಮಟ್ಟದಲ್ಲಿ ತಹಶೀಲ್ದಾರ್ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಲಾಗಿದೆ. ಅಲ್ಲದೇ, ಸ್ಥಳೀಯ ಜಾನಪದ ಕಲಾ ತಂಡಗಳ ನೃತ್ಯ ಪ್ರದರ್ಶನ ನಡೆಯಲಿದೆ. ಮಾನವ ಸರಪಳಿಯಲ್ಲಿ ಎಲ್ಲರೂ ಭಾಗವಹಿಸಲು ಅವಕಾಶವಿದ್ದು, ಆನ್ ಲೈನ್ ನಲ್ಲಿ ನೋಂದಾಯಿಸುವವರಿಗೆ ಪ್ರಮಾಣ ಪತ್ರ ವಿತರಿಸಲಾಗುವುದು ಎಂದು ಹೇಳಿದ್ದಾರೆ.
ಪೂರ್ವಭಾವಿ ಸಭೆಯಲ್ಲಿ ತಾಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿಗಳು, ಸಂಘ- ಸಂಸ್ಥೆಗಳ ಸದಸ್ಯರು, ಶಾಲಾ ಕಾಲೇಜುಗಳ ಬೋಧಕ, ಬೋಧಕೇತರ ಸಿಬ್ಬಂದಿಗಳು, ವಿದ್ಯಾರ್ಥಿಗಳು ಭಾಗವಹಿಸಿದ್ದರು.