ಬೆಂಗಳೂರು: ಕೋವಿಡ್ ಸಾಂಕ್ರಾಮಿಕ ರೋಗ ಹಬ್ಬಿದ್ದ ಸಂದರ್ಭದಲ್ಲಿ ಪಿಪಿಇ ಕಿಟ್ ಹಾಗೂ ಇತರೆ ಸಾಮಾಗ್ರಿ ಖರೀದಿಯಲ್ಲಿ ಅಕ್ರಮ ನಡೆದಿರುವ ಹಿನ್ನೆಲೆಯಲ್ಲಿ ವೈದ್ಯಕೀಯ ಶಿಕ್ಷಣ ಇಲಾಖೆ ಆರ್ಥಿಕ ಸಲಹೆಗಾರ ಹಾಗೂ ಇಲಾಖೆಯ ಜಂಟಿ ನಿಯಂತ್ರಕ ರಘು ಜಿ.ಪಿ ಎಂಬುವವರನ್ನು ಅಮಾನತು ಮಾಡಲಾಗಿದೆ.
ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೋವಿಡ್ ನ್ನು ನಿಭಾಯಿಸುವಲ್ಲಿ 7 ಸಾವಿರ ಕೋಟಿ ರೂ.ಗೂ ಅಧಿಕ ಅಕ್ರಮ ನಡೆದಿದೆ ಎಂದು ಆರೋಪಿಸಿದ್ದ ನ್ಯಾಯಮೂರ್ತಿ ಜಾನ್ ಮೈಕೆಲ್ ಡಿ’ಕುನ್ಹಾ ಆಯೋಗವು ತನ್ನ ಮಧ್ಯಂತರ ವರದಿಯನ್ನು 2024 ಆಗಸ್ಟ್ 31 ರಂದು ಸಿಎಂ ಸಿದ್ದರಾಮಯ್ಯ ಅವರಿಗೆ ಸಲ್ಲಿಸಿತ್ತು.
ಅಲ್ಲದೇ, ಹಿಂದಿನ ಸರ್ಕಾರದಲ್ಲಿನ ಸಚಿವರಾಗಿದ್ದ ಡಾ. ಕೆ. ಸುಧಾಕರ್ ವಿರುದ್ಧ ಅಕ್ರಮ ನಡೆಸಿರುವ ಆರೋಪ ಮಾಡಲಾಗಿತ್ತು. ವೆಂಟಿಲೇಟರ್, ನಿರ್ವಹಣೆ ಲೋಪ, ಆಕ್ಸಿಜನ್ ಉಪಕರಣಗಳ ಖರೀದಿ, ಕೋವಿಡ್-19 ನಿರ್ವಹಣಾ ಉಪಕರಣಗಳು, ರ್ಯಾಪಿಡ್ ಆಂಟಿಜೆನ್ ಟೆಸ್ಟ್ ಕಿಟ್‌ಗಳ ಖದೀದಿ ಮತ್ತು ಸಂಗ್ರಹಣೆಯಲ್ಲಿ ಅಕ್ರಮ ನಡೆದ ಆರೋಪಕ್ಕೆ ಸಂಬಂಧಿಸಿದಂತೆ ವರದಿ ಸಲ್ಲಿಸಲಾಗಿತ್ತು. ಸದ್ಯ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಅಧಿಕಾರಿಯನ್ನು ಅಮಾನತು ಮಾಡಲಾಗಿದೆ.