ಬೆಂಗಳೂರು : ಕರ್ನಾಟಕ ರಾಜ್ಯ ಮಹಿಳಾ ಆಯೋಗ ಹಾಗೂ ಎಂ.ಎಸ್.ರಾಮಯ್ಯ ವೈದ್ಯಕೀಯ ಕಾಲೇಜು ಆಸ್ಪತ್ರೆ ಮತ್ತು ಸರ್ಕಾರಿ ಕಲಾ ಕಾಲೇಜು ಬೆಂಗಳೂರು ಇವರುಗಳ ಸಹಯೋಗದೊಂದಿಗೆ, ನವರಾತ್ರಿ ಉತ್ಸವದ ಅಂಗವಾಗಿ “ಕೆಲಸದ ಸ್ಥಳದಲ್ಲಿ ಮಹಿಳೆಯರಿಗೆ ಲೈಂಗಿಕ ಕಿರುಕುಳ (ತಡೆಗಟ್ಟುವಿಕೆ, ನಿಷೇಧಿಸುವಿಕೆ, ನಿವಾರಿಸುವಿಕೆ) ಅಧಿನಿಯಮ 2013ರ ಕಾರ್ಯಾಗಾರ” ಮತ್ತು “ಗರ್ಭಕೋಶ, ಸ್ತನ ಕ್ಯಾನ್ಸರ್ ಕುರಿತು ಆರೋಗ್ಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರ” (ಸಂಗ್ರಹವಾದ ರಕ್ತದ ಕಣಗಳನ್ನು ಕಿದ್ವಾಯಿ ಕ್ಯಾನ್ಸರ್ ಪೀಡಿತ ಮಹಿಳೆಯರಿಗೆ ಉಚಿತವಾಗಿ ನೀಡುವ ಗುರಿಯೊಂದಿಗೆ) ಒಂದು ದಿನದ ಕಾರ್ಯಕ್ರಮವನ್ನು ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಮಾನ್ಯ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌಧರಿ, ಇವರ ನೇತೃತ್ವದಲ್ಲಿ ನಡೆಯಿತು.
ಕಾರ್ಯಕ್ರಮದಲ್ಲಿ ಆಯೋಗದ ಕಾರ್ಯದರ್ಶಿಗಳಾದ ಶ್ರೀಮತಿ ರೂಪ ಆರ್, ಕಾಲೇಜಿನ ಪ್ರಾಂಶುಪಾಲರಾದ ಡಾ. ಬಿ.ಸಿ.ನಾಗೇಂದ್ರಕುಮಾರ್ ಮತ್ತು ಸಿಬ್ಬಂದಿಗಳು ಹಾಗೂ ಎಂ.ಎಸ್.ರಾಮಯ್ಯ ವೈದ್ಯಕೀಯ ಕಾಲೇಜು ಆಸ್ಪತ್ರೆಯ ಸಂಪನ್ಮೂಲ ವ್ಯಕ್ತಿಗಳು ಉಪಸ್ಥಿತರಿದ್ದರು. ಈ ಕಾರ್ಯಕ್ರಮದಲ್ಲಿ ಅನೇಕ ಮಹಿಳೆಯರು ಹಾಗೂ ವಿದ್ಯಾರ್ಥಿನಿಯರು ಭಾಗವಹಿಸಿ ಕಾರ್ಯಕ್ರಮದ ಪ್ರಯೋಜನವನ್ನು ಪಡೆದುಕೊಂಡರು.
ಡಾ. ನಾಗಲಕ್ಷ್ಮೀ ಚೌಧರಿ ಕಾರ್ಯಕ್ರಮ ಉದ್ಘಾಟಿಸಿ, ಪ್ರತಿಯೊಬ್ಬ ಮಹಿಳೆಯರು ಕಾನೂನುಗಳನ್ನು ಸರಿಯಾಗಿ ಅರಿತುಕೊಳ್ಳಬೇಕು ಹಾಗೂ ಯಾವುದೇ ತಪ್ಪುಗಳನ್ನು ಪ್ರಶ್ನಿಸುವ ಅಭ್ಯಾಸ ಬೆಳೆಸಿಕೊಳ್ಳುವುದು ಬಹಳ ಮುಖ್ಯವಾಗುತ್ತದೆ. ಇದರಿಂದ ಬದಲಾವಣೆಯನ್ನು ಕಾಣಬಹುದಾಗಿದೆ. ಮಹಿಳೆಯರು ಮತ್ತು ವಿದ್ಯಾರ್ಥಿನಿಯರು ಜ್ಞಾನದ ಬಲವನ್ನು ವೃದ್ಧಿಸಿಕೊಳ್ಳಬೇಕು. ಇದರಿಂದ ಮಹಿಳೆಯರ ಸರ್ವತೋಮುಖ ಅಭಿವೃದ್ಧಿಗೆ ದಿಕ್ಕೂಚಿಯಾಗುತ್ತದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ಮಹಿಳೆಯರು ಆರೋಗ್ಯದ ಬಗ್ಗೆ ಹೆಚ್ಚಿನ ಗಮನ ವಹಿಸುವ ಅಗತ್ಯತೆ ಇದೆ ಎಂದು ಸಲಹೆ ನೀಡಿದರು. ಈ ಕಾರ್ಯಕ್ರಮವು ಮಹಿಳೆಯರ ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸುವಲ್ಲಿ ಪ್ರಮುಖ ಪಾತ್ರವಹಿಸುತ್ತದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿ, ಮುಂದಿನ ದಿನಗಳಲ್ಲಿ ಆಯೋಗವು ಮಹಿಳೆಯರ ಆರೋಗ್ಯವನ್ನು ದೃಷ್ಟಿಯಲ್ಲಿರಿಸಿಕೊಂಡು ಕಾರ್ಯಕ್ರಮಗಳನ್ನು ರೂಪಿಸುತ್ತದೆ ಎಂದು ಅಭಿಪ್ರಾಯಪಟ್ಟರು.
ಸಂಪನ್ಮೂಲ ವ್ಯಕ್ತಿಗಳು ಆರೋಗ್ಯದ ಬಗ್ಗೆ ಹಾಗೂ ಲೈಂಗಿಕ ದೌರ್ಜನ್ಯದ ವಿರುದ್ಧ ಕಾನೂನಿನ ಅರಿವಿನ ಬಗ್ಗೆ ಮಾಹಿತಿಯನ್ನು ತಿಳಿಸಿದರು.



