ಬೆಂಗಳೂರು: ಕರ್ನಾಟಕದ ಕರಾವಳಿ, ಮಲೆನಾಡು ಸೇರಿದಂತೆ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಜನ – ಜೀವನ ಸಂಪೂರ್ಣವಾಗಿ ಅಸ್ತವ್ಯಸ್ಥವಾಗಿದೆ. ಹೀಗಾಗಿ ನಾಳೆ ಕೂಡ ಮುಂಜಾಗೃತಾ ಕ್ರಮವಾಗಿ ಹಲವು ಜಿಲ್ಲೆಗಳ ಶಾಲಾ- ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಮಹಾರಾಷ್ಟ್ರ, ಪಶ್ಚಿಮ ಘಟ್ಟದ ಜಲಾನಯನ ಪ್ರದೇಶಗಳಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಲಾಶಯಗಳು ಸಂಪೂರ್ಣ ಭರ್ತಿಯಾಗಿವೆ. ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. ಹಲವೆಡೆ ಮಳೆ ಕಡಿಮೆಯಾಗಿ ಬಿರುಗಾಳಿ ಬೀಸುತ್ತಿದೆ. ಹೀಗಾಗಿ ಸಾಕಷ್ಟು ಅವಾಂತರಗಳು ಸಂಭವಿಸುತ್ತಿವೆ. ಈ ನಿಟ್ಟಿನಲ್ಲಿಯೇ ಮುಂಜಾಗೃತಾ ಕ್ರಮವಾಗಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಚಿಕ್ಕಮಗಳೂರು ಜಿಲ್ಲೆಯ 6 ತಾಲೂಕು, ಧಾರವಾಡ, ಕೊಡಗು ಜಿಲ್ಲೆಗಳಿಗೆ ಶನಿವಾರ ರಜೆ ಘೋಷಿಸಲಾಗಿದೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಳೆ ಕಡಿಮೆಯಾದ್ರೂ ಬಿರುಗಾಳಿ ಬೀಸುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ 6 ತಾಲೂಕಿನ ಶಾಲಾ- ಕಾಲೇಜುಗಳಿಗೆ ನಾಳೆ ರಜೆ ನೀಡಲಾಗಿದೆ.
ಚಿಕ್ಕಮಗಳೂರು, ಮೂಡಿಗೆರೆ, ಕಳಸ, ಶೃಂಗೇರಿ, ಎನ್.ಆರ್.ಪುರ ಹಾಗೂ ಕೊಪ್ಪ ತಾಲೂಕಿನ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಕೊಡಗು ಜಿಲ್ಲೆಯಾದ್ಯಂತ ಭಾರಿ ಮಳೆ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ನಾಳೆಯೂ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ವೆಂಕಟರಾಜಾ ಆದೇಶ ಹೊರಡಿಸಿದ್ದಾರೆ. ಧಾರವಾಡ ಜಿಲ್ಲೆಯಲ್ಲಿ ಮಳೆ ಹಾಗೂ ಶೀತ ಗಾಳಿ ಮುಂದುವರೆದ ಹಿನ್ನೆಲೆಯಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ದಿವ್ಯಪ್ರಭು ಆದೇಶ ಹೊರಡಿಸಿದ್ದಾರೆ.
ಮಳೆಯ ಹಿನ್ನೆಲೆಯಲ್ಲಿ ಗುರುವಾರ, ಶುಕ್ರವಾರ ರಜೆ ಘೋಷಿಸಲಾಗಿತ್ತು. ಆದರೆ, ಮಳೆ ಮುಂದುವರೆದ ಹಿನ್ನೆಲೆಯಲ್ಲಿ ಶನಿವಾರ ಕೂಡ ಮುಂದುವರೆಸಲಾಗಿದೆ. ಮುಂದಿನ ಸಾರ್ವಜನಿಕ ರಜಾ ದಿನಗಳಲ್ಲಿ ಹೆಚ್ಚುವರಿ ವರ್ಗಗಳನ್ನು ನಡೆಸುವಂತೆ ಸೂಚಿಸಲಾಗಿದೆ. ಬೆಳಗಾವಿ ಜಿಲ್ಲೆಯಲ್ಲಿ ವ್ಯಾಪಕ ಮಳೆ ಹಿನ್ನೆಲೆಯಲ್ಲಿ ಶನಿವಾರವೂ ರಜೆ ಘೋಷಿಸಲಾಗಿದೆ. ರಾಮದುರ್ಗ ತಾಲೂಕಿನಲ್ಲಿ ಮಳೆ ಇಲ್ಲದ ಹಿನ್ನೆಲೆಯಲ್ಲಿ ಆ ತಾಲೂಕು ಹೊರತು ಪಡಿಸಿ ಉಳಿದ ತಾಲೂಕುಗಳಲ್ಲಿ ರಜೆ ಘೋಷಿಸಲಾಗಿದೆ.