ಆಂಧ್ರಪ್ರದೇಶ : ತಿರುಪತಿ ಲಡ್ಡುವಿನಲ್ಲಿ ಪ್ರಾಣಿಗಳ ಕೊಬ್ಬಿನ ಅಂಶ ಕಂಡು ಬಂದ ವಿಷಯ ದೊಡ್ಡ ಸಂಚಲನವನ್ನೇ ಸೃಷ್ಟಿಸಿದೆ. ಈ ಮಧ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಗನ್ ಮೋಹನ್ ರೆಡ್ಡಿ ಸ್ಪಷ್ಟನೆ ನೀಡಿದ್ದು, ಆರೋಪ ತಳ್ಳಿ ಹಾಕಿದ್ದಾರೆ.
ಜಗನ್ ಮೋಹನ್ ರೆಡ್ಡಿ ನೇತೃತ್ವದ ಸರ್ಕಾರವಿದ್ದ ಸಂದರ್ಭದಲ್ಲಿ ತಿರುಪತಿ ಲಡ್ಡುಗಳನ್ನು ತಯಾರಿಸಲು ಪ್ರಾಣಿಗಳ ಕೊಬ್ಬು, ಮೀನಿನ ಎಣ್ಣೆಯ ಅಂಶವಿರುವ ತುಪ್ಪ ಬಳಸಲಾಗಿತ್ತು ಎಂಬ ಎಂಬ ಆರೋಪದ ಕುರಿತು ಈಗಾಗಲೇ ಕೇಂದ್ರ ಆರೋಗ್ಯ ಸಚಿವಾಲಯವು ವಿವರವಾದ ವರದಿ ಸಲ್ಲಿಸುವಂತೆ ಆಂಧ್ರಪ್ರದೇಶ ಸರ್ಕಾರಕ್ಕೆ ಸೂಚಿಸಿದೆ. ಈ ವಿಷಯವಾಗಿ ಮಾತನಾಡಿರುವ ಮಾಜಿ ಸಿಎಂ ಜಗನ್ ರೆಡ್ಡಿ, ಚಂದ್ರಬಾಬು ನಾಯ್ಡು ಅವರು ದೇವರನ್ನು ರಾಜಕೀಯ ಲಾಭಕ್ಕಾಗಿ ಬಳಸಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ಪ್ರಸಾದದ ಅರ್ಹತೆಯ ಮಾನದಂಡವು ದಶಕಗಳಿಂದ ಬದಲಾಗಿಲ್ಲ. ದೇವರನ್ನು ರಾಜಕೀಯಕ್ಕೆ ಬಳಸಿಕೊಳ್ಳುವ ಮನಸ್ಥಿತಿ ಇರುವುದು ಚಂದ್ರಬಾಬು ನಾಯ್ಡುಗೆ ಮಾತ್ರ. ಜನರ ಗಮನವನ್ನು ತಮ್ಮತ್ತ ಸೆಳೆಯಲು ಅವರು ಈ ರೀತಿ ಆರೋಪ ಮಾಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ತಿರುಮಲ ತಿರುಪತಿ ದೇವಸ್ಥಾನಂ (ಟಿಟಿಡಿ) ತುಪ್ಪದಿಂದ ಮಾದರಿಗಳನ್ನು ಸಂಗ್ರಹಿಸುತ್ತದೆ. ಪ್ರತಿ 6 ತಿಂಗಳಿಗೊಮ್ಮೆ ಟೆಂಡರ್ ಪ್ರಕ್ರಿಯೆ ನಡೆಯುತ್ತದೆ. ದಶಕಗಳಿಂದ ಈ ಅರ್ಹತಾ ಮಾನದಂಡಗಳು ಬದಲಾಗಿಲ್ಲ ಎಂದು ಹೇಳಿದ್ದಾರೆ.