ಬಳ್ಳಾರಿ : ನಗರದಲ್ಲಿ ಇಂದು ಬೆಳ್ಳಂಬೆಳಗ್ಗೆ ಮತ್ತೆ ಜೆಸಿಬಿ ಘರ್ಜನೆ ಕೇಳಿಬಂದಿದ್ದು, ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಭಾರೀ ತೆರವು ಕಾರ್ಯಾಚರಣೆ ಮುಂದುವರಿದಿದೆ. ಸರ್ಕಾರಿ ಜಾಗಗಳ ಮೇಲೆ ನಡೆದಿದ್ದ ಒತ್ತುವರಿ ತೆರವಿಗೆ ಅಧಿಕಾರಿಗಳು ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದು, ಅಬಾಂಡೆಡ್ ಕಟ್ಟಡಗಳು ಹಾಗೂ ಅಕ್ರಮ ಒತ್ತುವರಿ ನಿರ್ಮಾಣಗಳನ್ನು ನೆಲಸಮ ಮಾಡಲಾಗಿದೆ.
ಅಪರ ಜಿಲ್ಲಾಧಿಕಾರಿ ಮೊಹಮ್ಮದ್ ಝುಬೇರ್ ನೇತೃತ್ವದಲ್ಲಿ ಈ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಮಹಾನಗರ ಪಾಲಿಕೆ ಅಧಿಕಾರಿಗಳು, ಪೊಲೀಸ್ ಸಿಬ್ಬಂದಿ ಹಾಗೂ ಇತರ ಇಲಾಖೆಯ ಸಿಬ್ಬಂದಿ ಜಂಟಿಯಾಗಿ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು. ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಭದ್ರತೆಯನ್ನೂ ಒದಗಿಸಲಾಗಿತ್ತು.
ನಗರದ ವಿವಿಧ ಭಾಗಗಳಲ್ಲಿ ಕೆಲ ಪಟ್ಟಭದ್ರ ಹಿತಾಶಕ್ತಿಗಳು ಸರ್ಕಾರಿ ಜಾಗಗಳನ್ನು ಅಕ್ರಮವಾಗಿ ಕಬಳಿಸಿದ್ದರೆಂಬ ಆರೋಪಗಳು ಕೇಳಿಬಂದಿದ್ದವು. ಇದರಿಂದ ಸಾರ್ವಜನಿಕರು ಹಲವು ಬಾರಿ ದೂರು ನೀಡಿದ್ದರು. ಸಾರ್ವಜನಿಕರ ದೂರುಗಳ ಆಧಾರದ ಮೇಲೆ ಅಧಿಕಾರಿಗಳು ಕಳೆದ ಒಂದು ತಿಂಗಳಿಂದ ನಿರಂತರವಾಗಿ ಒತ್ತುವರಿ ತೆರವು ಕಾರ್ಯಾಚರಣೆ ನಡೆಸುತ್ತಿದ್ದಾರೆ.
ಇಂದು ನಗರದ ಕೋಟೆ ಏರಿಯಾ ಭಾಗದಲ್ಲಿ ಕಾರ್ಯಾಚರಣೆ ನಡೆಸಲಾಗಿದೆ. ಅಬಾಂಡೆಡ್ ಕಟ್ಟಡಗಳು, ಅಕ್ರಮವಾಗಿ ನಿರ್ಮಿಸಿದ್ದ ಶೆಡ್‌ಗಳು ಹಾಗೂ ಒತ್ತುವರಿ ಮಾಡಿಕೊಂಡಿದ್ದ ಜಾಗಗಳನ್ನು ಜೆಸಿಬಿಗಳ ಮೂಲಕ ತೆರವುಗೊಳಿಸಲಾಯಿತು. ಕಾರ್ಯಾಚರಣೆಯ ವೇಳೆ ಸ್ಥಳೀಯರು ಕೂಡ ಸಾಕಷ್ಟು ಸಂಖ್ಯೆಯಲ್ಲಿ ಸೇರಿದ್ದರು. ಇನ್ನು ನಗರದ ವಿವಿಧ ಭಾಗಗಳಲ್ಲಿ ಇನ್ನೂ ಹಲವೆಡೆ ಅಕ್ರಮ ಒತ್ತುವರಿ ಇರುವ ಮಾಹಿತಿ ದೊರೆತಿದ್ದು, ಮುಂದಿನ ದಿನಗಳಲ್ಲಿಯೂ ತೆರವು ಕಾರ್ಯಾಚರಣೆ ಮುಂದುವರಿಯಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇದನ್ನೂ ಓದಿ : ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವು? ಕ್ಲಿನಿಕ್ ಎದುರು ಕುಟುಂಬಸ್ಥರ ಪ್ರತಿಭಟನೆ!



















