ಬೆಂಗಳೂರು.ಗ್ರಾ: ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕನ್ನಡಿಗರಿಗೆ ಉದ್ಯೋಗಾವಕಾಶ ಕಲ್ಪಿಸುವಂತೆ ಕರವೇ ಪ್ರವೀಣ್ ಶೆಟ್ಟಿ ಬಣ ಆಗ್ರಹಿಸಿದೆ.ಕರವೇ ರಾಜ್ಯಾಧ್ಯಕ್ಷ ಪ್ರವೀಣ್ ಶೆಟ್ಟಿ ಅವರು ವಿಮಾನ ನಿಲ್ದಾಣಕ್ಕೆ ಭೇಟಿ ನೀಡಿ ಆಡಳಿತ ಮಂಡಳಿಗೆ ಮನವಿ ಸಲ್ಲಿಸಿದ್ದಾರೆ. ಕನ್ನಡಿಗರಿಗೆ ಉದ್ಯೋಗ ನೀಡುವಲ್ಲಿ ವಿಮಾನ ನಿಲ್ದಾಣ ಆಡಳಿತ ಮಂಡಳಿ ನಿರ್ಲಕ್ಷ್ಯ ತೋರುತ್ತಿದೆ ಎಂದು ಅವರು ಆರೋಪಿಸಿದ್ದಾರೆ.
ಕನ್ನಡಿಗರನ್ನು ಕೇವಲ ಹೌಸ್ಕೀಪಿಂಗ್ ಮತ್ತು ಸೆಕ್ಯುರಿಟಿ ಕೆಲಸಗಳಿಗೆ ಮಾತ್ರ ಸೀಮಿತಗೊಳಿಸಿ, ಉನ್ನತ ಹುದ್ದೆ ಹಾಗೂ ಪ್ರಮುಖ ವಿಭಾಗಗಳಲ್ಲಿ ಪರಭಾಷಿಕರಿಗೆ ಹೆಚ್ಚಿನ ಪ್ರಾತಿನಿಧ್ಯ ನೀಡಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕನ್ನಡಿಗರಿಗೆ ಅರ್ಹತೆಗೆ ತಕ್ಕ ಉದ್ಯೋಗಾವಕಾಶ ನೀಡುತ್ತಿಲ್ಲ ಎಂದಿರುವ ಕರವೇ, ಕನ್ನಡ ನೆಲದಲ್ಲಿ ನಿರ್ಮಾಣವಾಗಿರುವ ವಿಮಾನ ನಿಲ್ದಾಣದಲ್ಲಿ ಸ್ಥಳೀಯ ಕನ್ನಡಿಗ ಯುವಕ-ಯುವತಿಯರಿಗೆ ಉದ್ಯೋಗ ನೇಮಕಾತಿಯಲ್ಲಿ ಮೊದಲ ಆದ್ಯತೆ ನೀಡಿ, ವಿವಿಧ ವಿಭಾಗಗಳಲ್ಲಿ ಸಮಾನ ಅವಕಾಶ ಕಲ್ಪಿಸಬೇಕು ಎಂದು ಒತ್ತಾಯಿಸಿದೆ.


















