ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ 17ನೇ ಬಜೆಟ್‌ನಲ್ಲಿ ಗ್ಯಾರಂಟಿ ಯೋಜನೆಗಳಿಗಾಗಿಯೂ ಅನುದಾನ ಮೀಸಲಿಟ್ಟಿದ್ದಾರೆ. ಅದರಲ್ಲೂ, ಹೆಣ್ಣುಮಕ್ಕಳು ಉಚಿತವಾಗಿ ಬಸ್ ಗಳಲ್ಲಿ ಪ್ರಯಾಣಿಸಲು ಅನುಕೂಲ ಮಾಡಿಕೊಡುವ ಶಕ್ತಿ ಯೋಜನೆ ಹಾಗೂ ಪ್ರತಿ ತಿಂಗಳು ಹೆಣ್ಣುಮಕ್ಕಳ ಖಾತೆಗೆ ಜಮೆ ಮಾಡಲಾಗುವ ಗೃಹ ಲಕ್ಷ್ಮೀ ಯೋಜನೆಗೆ ಭರಪೂರ ಅನುದಾನ ನೀಡಿದ್ದಾರೆ. ಎರಡೂ ಯೋಜನೆಗಳಿಗಾಗಿಯೇ ಸಿದ್ದರಾಮಯ್ಯ ಅವರು 33,900 ಕೋಟಿ ರೂಪಾಯಿ ಮೀಸಲಿಟ್ಟಿರುವುದು ಗಮನಾರ್ಹವಾಗಿದೆ.
ಮಹಿಳಾ ಸಬಲೀಕರಣದ ಸದುದ್ದೇಶದಿಂದ ಜಾರಿಗೆ ತರಲಾಗಿರುವ ಸರ್ಕಾರದ ಮಹತ್ವಾಕಾಂಕ್ಷಿ ಶಕ್ತಿ ಯೋಜನೆಯಡಿ ಪ್ರಯೋಜನ ಪಡೆಯುತ್ತಿರುವ ಮಹಿಳಾ ಪ್ರಯಾಣಿಕರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು ಇದುವರೆಗೆ 684 ಕೋಟಿ ಟ್ರಿಪ್ ಗಳಲ್ಲಿ ಮಹಿಳಾ ಫಲಾನುಭವಿಗಳು ಪ್ರಯಾಣ ಸೌಲಭ್ಯ ಪಡೆದಿರುತ್ತಾರೆ. ಈ ಯೋಜನೆಯ ಅನುಷ್ಠಾನಕ್ಕಾಗಿ 2026-27ನೇ ಸಾಲಿಗೆ 5,300 ಕೋಟಿ ರೂ.ಗಳನ್ನು ಒದಗಿಸಲಾಗುವುದು ಎಂದು ಹೇಳಿದ್ದಾರೆ.
ಗೃಹಲಕ್ಷ್ಮಿ ಯೋಜನೆಯಡಿ ಇಲ್ಲಿಯವರೆಗೂ ಎಲ್ಲಾ ಅರ್ಹ ಫಲಾನುಭವಿಗಳಿಗೆ ಒಟ್ಟು 62,345ಕೋಟಿ ರೂ.ಗಳ ವೆಚ್ಚ ಭರಿಸಲಾಗಿದೆ. ಈ ಯೋಜನೆಯಡಿ 1.24 ಕೋಟಿ ಫಲಾನುಭವಿಗಳಿಗೆ ಯಶಸ್ವಿಯಾಗಿ ಧನಸಹಾಯ ಪಾವತಿಸಲಾಗುತ್ತಿದೆ. ಪ್ರಸಕ್ತ ವರ್ಷದಲ್ಲಿ ಈ ಯೋಜನೆಯಡಿ 28,608 ಕೋಟಿ ರೂ.ಗಳನ್ನು ಮೀಸಲಿರಿಸಿದೆ ಎಂದು ತಿಳಿಸಿದ್ದಾರೆ.
ಪಂಚ ಗ್ಯಾರಂಟಿಗಳಲ್ಲಿ ಗೃಹ ಲಕ್ಷ್ಮೀ ಹಾಗೂ ಶಕ್ತಿ ಯೋಜನೆಯನ್ನು ರಾಜ್ಯ ಸರ್ಕಾರ ಸಮರ್ಪಕವಾಗಿ ಜಾರಿಗೊಳಿಸಲಾಗುತ್ತಿದೆ. ಇದರಿಂದಾಗಿ ರಾಜ್ಯದ ಮಹಿಳೆಯರು ಸರ್ಕಾರದ ಪರವಾಗಿದ್ದಾರೆ ಎಂಬ ನಂಬಿಕೆಯೂ ಸರ್ಕಾರಕ್ಕೆ ಇದೆ. ಇದೇ ಕಾರಣದಿಂದಾಗಿ ಪ್ರಸಕ್ತ ಬಜೆಟ್ ನಲ್ಲೂ ಸಿದ್ದರಾಮಯ್ಯ ಅವರು ಹೆಣ್ಣುಮಕ್ಕಳಿಗೆ ಭರಪೂರ ಕೊಡುಗೆ ನೀಡಿದ್ದಾರೆ.
ಇದನ್ನೂ ಓದಿ : ಹಿಂದೂ ವಿರೋಧಿ ಹಣೆಪಟ್ಟಿ ಕಳಚಲು ಬಜೆಟ್‌ನಲ್ಲಿ ಸಿದ್ದರಾಮಯ್ಯ ಬಂಪರ್ ಘೋಷಣೆ!



















